ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಪತ್ನಿ ರಾಜೇಶ್ವರಿ ಜಾಮೀನು ಅರ್ಜಿ ವಜಾ

ಉಡುಪಿ ಮೂಲದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಅವರ....
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಉಡುಪಿ ಮೂಲದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಅವರ ಪತ್ನಿ ರಾಜೇಶ್ವರಿ ಅವರಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಕಳೆದ ವರ್ಷ ಉಡುಪಿಯಲ್ಲಿ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪತ್ನಿ ರಾಜೇಶ್ವರಿಗೆ ತನಿಖೆ ಪೂರ್ಣಗೊಳ್ಳುವ ತನಕ ಜಾಮೀನು ನೀಡಲು ಸಾಧ್ಯವಿಲ್ಲ. ಆರು ತಿಂಗಳೊಳಗೆ ತನಿಖೆ ಪುರ್ಣಗೊಳ್ಳದಿದ್ರೆ ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ನ್ಯಾ. ಎಸ್.ಎ. ಬೊಬ್ಡೆ, ನ್ಯಾ ನಾಗೇಶ್ವರ ರಾವ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶಿಸಿದೆ.
ರಾಜೇಶ್ವರಿ ಪರವಾಗಿ ಹಾಜರಾದ ಹಿರಿಯ ವಕೀಲ ಬಸವ ಪ್ರಭು ಪಾಟೀಲ ಅವರು ಜಾಮೀನು ಅರ್ಜಿಯನ್ನು ಮಾನ್ಯ ಮಾಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕರ್ನಾಟಕ ರಾಜ್ಯ ಪೊಲೀಸ್‌ ಪರ ವಕೀಲ ಜೋಸೆಫ್‌ ಅರಿಸ್ಟಾಟಲ್‌, ‘ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಹತ್ಯೆ ಮಾಡಲು ನೆರವಾಗಿರುವ ಆರೋಪ ಹೊತ್ತಿರುವ ಪುರೋಹಿತ ನಿರಂಜನ್‌ ಭಟ್‌ ವಿರುದ್ಧ ತನಿಖಾಧಿಕಾರಿಗಳು ಶೀಘ್ರದಲ್ಲಿ ಪೂರಕ ಆರೋಪ ಪಟ್ಟಿ ಸಲ್ಲಿಸಲಿದ್ದಾರೆ ಎಂದು ಹೇಳಿದರು.
ಉದ್ಯಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿಗಳಾದ ರಾಜೇಶ್ವರಿ, ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಆರೋಪಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆಅರ್ಜಿ ಸಲ್ಲಿಸಿದ್ದರು.
ರಾಜೇಶ್ವರಿ ಅವರು ಕಳೆದ ಆಗಸ್ಟ್‌ನಿಂದ ಪೊಲೀಸರ ವಶದಲ್ಲಿದ್ದಾರೆ. ಪೊಲೀಸರು ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿರುವುದರಿಂದ ಅವರ ತನಿಖೆ ಮುಗಿದಿದೆ. ಹಾಗಾಗಿ, ಅವರಿಗೆ ಜಾಮೀನು ನೀಡಬೇಕು ಎಂದು ಪಾಟೀಲ ಮನವಿ ಮಾಡಿದ್ದರು. ಆದರೆ ಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com