ಇಂಜಿನಿಯರಿಂಗ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣನೆ?

ಎಂಜಿನಿಯರಿಂಗ್ ಸಿಇಟಿ ಪ್ರವೇಶ ಪರೀಕ್ಷೆಗೆ ಇನ್ನು ಮುಂದೆ ಪಿಯುಸಿ ಅಂಕಗಳಿಕೆಯನ್ನು ಪರಿಗಣಿಸದಿರಲು ರಾಜ್ಯ ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ..
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಎಂಜಿನಿಯರಿಂಗ್ ಸಿಇಟಿ ಪ್ರವೇಶ ಪರೀಕ್ಷೆಗೆ ಇನ್ನು ಮುಂದೆ ಪಿಯುಸಿ ಅಂಕಗಳಿಕೆಯನ್ನು ಪರಿಗಣಿಸದಿರಲು ರಾಜ್ಯ  ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ಉನ್ನತ ಶಿಕ್ಷಣ ಇಲಾಖೆ ಎಂಜಿನಿಯರಿಂಗ್ ಮತ್ತು ಇತರೆ ವೃತ್ತಿಪರ ಪ್ರವೇಶ ಪರೀಕ್ಷೆಯಲ್ಲಿ ಜೆಇಇ ಮಾದರಿಯ ರ್ಯಾಂಕಿಂಗ್ ವ್ಯವಸ್ಥೆ ಜಾರಿ ಮಾಡಲು ಮುಂದಾಗಿದ್ದು, ಪರೀಕ್ಷೆಯಲ್ಲಿ ಗಳಿಸುವ ಅಂಕಗಳನ್ನು  ಮಾತ್ರ ಸೀಟು ಹಂಚಿಕೆಗೆ ಪರಿಗಣಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಬಂದ ಹಲವಾರು ಅಹವಾಲುಗಳ ಅನ್ವಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ನೂತನ ಪ್ರಸ್ತಾಪವನ್ನು  ಉನ್ನತ ಶಿಕ್ಷಣ ಇಲಾಖೆಯ ಮುಂದಿಟ್ಟಿದ್ದು, ಇಲಾಖೆ ಅನುಮೋದನೆ ದೊರೆಯುತ್ತಿದ್ದಂತೆಯೇ ಸಿಇಟಿ ಪ್ರವೇಶ ಪರೀಕ್ಷೆಯ ನಿಯಮಾವಳಿಗಳಲ್ಲಿ ಬದಲಾವಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಇಲಾಖೆ ಉನ್ನತ ಮೂಲಗಳು ತಿಳಿಸಿರುವಂತೆ ಪ್ರಸಕ್ತ ಸಾಲಿನಿಂದಲೇ ಅಂದರೆ 2017ರ ವೃತ್ತಿಪರ ಪ್ರವೇಶ ಪರೀಕ್ಷೆಯಲ್ಲೇ ಈ ನೂತನ ಜೆಇಇ ಮಾದರಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಜಾರಿಗೆ ತರಲಾಗುತ್ತದೆ ಎಂದು  ಹೇಳಲಾಗುತ್ತಿದೆ. ಈಗಾಗಲೇ ಇಲಾಖೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ಉನ್ನತ ಮಟ್ಟದ ಚರ್ಚೆ ನಡೆಸುತ್ತಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಪ್ರಸ್ತುತ ಇರುವ ಸಿಇಟಿ ಪರೀಕ್ಷಾ ನಿಯಮಾವಳಿಗಳಂತೆ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಾತಿ ಬಯಸುವ ವಿದ್ಯಾರ್ಥಿ ಪಿಯುಸಿಯಲ್ಲಿ ಗಳಿಸಿದ ಅಂಕಗಳು ಹಾಗೂ ಸಿಇಟಿ ಪರೀಕ್ಷೆಯಲ್ಲಿ ಗಳಿಸಿದ ಎರಡೂ ಅಂಕಗಳನ್ನು  ಪರಿಗಣಿಸಲಾಗುತ್ತಿತ್ತು. ನೂತನ ವಿಧಾನದಿಂದ ಇನ್ನು ಮುಂದೆ ವಿದ್ಯಾರ್ಥಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಇಲಾಖೆಯ ಈ ನಿರ್ಧಾರ  ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಮತ್ತೊಂದೆಡೆ ಸರ್ಕಾರದ ನಿರ್ಧಾರಕ್ಕೆ ಪೋಷಕರ ವಲಯದಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಸರ್ಕಾರದ ನಿರ್ಧಾರದಿಂದ ಟ್ಯೂಷನ್ ಮಾಫಿಯಾ ಹಾಗೂ ಪೇಪರ್ ಲೀಕ್ ಮಾಫಿಯಾಗೆ ಬ್ರೇಕ್ ಬೀಳಲಿದೆ ಎಂದು ಅಭಿಪ್ರಾಯ  ವ್ಯಕ್ತವಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com