
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ 17 ವಿಶ್ವವಿದ್ಯಾಲಯಗಳು ಬೃಹತ್ ಹಗರಣಗಳಲ್ಲಿ ಭಾಗಿಯಾಗಿರುವುದಾಗಿ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಮಂಗಳವಾರ ಹೇಳಿದ್ದಾರೆ.
ನಗರದಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿರುವ ಎಲ್ಲಾ 17 ವಿಶ್ವವಿದ್ಯಾಲಯಗಳಲ್ಲಿ ಬೃಹತ್ ಹಗರಣಗಳು ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಸುಮಾರು ರೂ. 500 ಕೋಟಿಗಳವರೆಗೂ ಅಕ್ರಮ ನಡೆದಿರುವ ಬಗ್ಗೆ ಶಂಕೆಗಳು ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.
ವಿಶ್ವವಿದ್ಯಾಲಯಗಳು ಹಗರಣಗಳಲ್ಲಿ ಭಾಗಿಯಾಗಿರುವ ಹಿನ್ನಲೆಯಲ್ಲಿ ಕಳೆದ 10 ವರ್ಷಗಳಲ್ಲಿ ವಿವಿಗಳಲ್ಲಿ ನಡೆದಿರುವ ಹಗರಣಗಳ ತನಿಖೆಗೆ ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳ ನೇತೃತ್ವದ ಮೂರು ಸದಸ್ಯರ ಸಮಿತಿಯೊಂದನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ನಿರ್ಧಾರಕ್ಕೆ ಸೋಮವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಿ ಮಾಡಿದ್ದು, ಶೀಘ್ರದಲ್ಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ. ತನಿಖೆ ಪೂರ್ಣಗೊಂಡ ಬಳಿಕ ಹಗರಣದಲ್ಲಿ ಭಾಗಿಯಾಗಿರುವ ವಿವಿಗಳ ಕುರಿತು ವರದಿಯನ್ನು ಬಿಡುಗಡೆ ಮಾಡುತ್ತದೆ. ಕೆಲ ವಿವಿಗಳು ಕಳಪೆ ಗುಣಮಟ್ಟದ ಸಾರ್ವಜನಿಕ ಕಾಮಗಾರಿಗಳನ್ನು ನಡೆಸಿದ್ದು, ಇದನ್ನು ತನಿಖೆ ನಡೆಸುವ ಅಗತ್ಯವಿದೆ. ತನಿಖೆ ಪೂರ್ಣಗೊಂಡ ಬಳಿಕ ಆಯಾ ವಿವಿಗಳ ವಿರುದ್ಧ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ದ ಆರೋಪ ವ್ಯಕ್ತಪಡಿಸಿರುವ ಅವರು, ಉನ್ನತ ಶಿಕ್ಷಣ ಇಲಾಖೆಗೆ ನೀಡುತ್ತಿದ್ದ ಹಣವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ. ಇದೀಗ ರಾಜ್ಯ ಸರ್ಕಾರ ಶಿಕ್ಷಣ ಗುಣಮಟ್ಟ ಹೆಚ್ಚಳ ಮತ್ತು ಶಾಲಾ ಕಾಲೇಜುಗಳ ಅಭಿವೃದ್ಧಿಗಾಗಿ ವಿಶ್ವ ಬ್ಯಾಂಕ್ ನಿಂದ 3,500 ಕೋಟಿ ಸಾಲ ಪಡೆಯಲು ಉದ್ದೇಶಿಸಿದೆ.
ವಿಶ್ವ ಬ್ಯಾಂಕ್ ನಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುವುದರಿಂದ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ. ಇದಕ್ಕೆ ಸಂಪುಟ ಸಭೆಯ ಒಪ್ಪಿಗೆ ಸಿಗಬೇಕಿದೆ. ರೂಸಾ ಯೋಜನೆಯಡಿಯಲ್ಲಿ ರೂ.400 ಕೋಟಿ ಅನುದಾನವನ್ನೇ ನೀಡದ ಕೇಂದ್ರ ಇನ್ನು ರೂ. 3,500 ಕೋಟಿ ಹಣವನ್ನು ನೀಡುತ್ತದೆ ಎಂಬ ಭರವಸೆಯಿಲ್ಲ. ಆದರೂ, ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜವಡೇಕರ್ ಅವರ ಬಳಿ ಮನವಿ ಮಾಡಲಾಗುತ್ತದೆ ಎಂದು ತಿಳಿಸಿದರು
Advertisement