ಸರ್ಕಾರಿ ಕೋಟಾದಡಿ ಸೀಟು ಪಡೆದ ವೈದ್ಯರಿಗೆ ಮಾತ್ರ ಗ್ರಾಮೀಣ ಸೇವೆ ಕಡ್ಡಾಯ

ಸರ್ಕಾರಿ ಕೋಟಾದಡಿ ಸೀಟು ಪಡೆದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಾತ್ರ ಒಂದು ವರ್ಷ ‘ಕಡ್ಡಾಯ ಗ್ರಾಮೀಣ ಸೇವೆ’ ಕಾಯ್ದೆ ಜಾರಿಗೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಸರ್ಕಾರಿ ಕೋಟಾದಡಿ ಸೀಟು ಪಡೆದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಾತ್ರ ಒಂದು ವರ್ಷ ‘ಕಡ್ಡಾಯ ಗ್ರಾಮೀಣ ಸೇವೆ’ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ ಕಾಯ್ದೆ- 2012ಕ್ಕೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದ್ದು, ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸಿದ್ಧತೆ ನಡೆದಿದೆ.
ಈ ಮುಂಚೆ ಕರ್ನಾಟಕದಲ್ಲಿ ವೈದ್ಯಕೀಯ ಕೋರ್ಸ್ ಮಾಡುವ ಎಲ್ಲಾ ವಿದ್ಯಾರ್ಥಿಗಳಿಗೂ ಗ್ರಾಮೀಣ ಸೇವೆ ಕಡ್ಡಾಯಗೊಳಿಸಲಾಗಿತ್ತು.
ರಾಜ್ಯ ಸರ್ಕಾರ 2015ರಲ್ಲಿ ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಕಡ್ಡಾಯ ಮಾಡಿ ಆದೇಶ ಹೊರಡಿಸಿತ್ತು. ಅದರಂತೆ, ‘ಒಂದು ವರ್ಷ ಕಡ್ಡಾಯವಾಗಿ ಗ್ರಾಮೀಣ ಸೇವೆ ಮಾಡುತ್ತೇವೆ’ ಎಂದು ವಿದ್ಯಾರ್ಥಿಗಳು ಪ್ರಮಾಣ ಪತ್ರ ಸಲ್ಲಿಸಬೇಕಿತ್ತು. ಇಲ್ಲದಿದ್ದರೆ ಎಂಬಿಬಿಎಸ್ ಪದವಿ ಪ್ರಮಾಣ ಪತ್ರ ದೊರೆಯುವುದಿಲ್ಲ ಎಂದು ಕಾಯ್ದೆ ಮಾಡಲಾಗಿತ್ತು.
ಸರ್ಕಾರದ ಆದೇಶ ಪ್ರಶ್ನಿಸಿ ಕೆಲವು ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್  ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈಗ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದು, ‘ಸರ್ಕಾರಿ ಕೋಟಾದಡಿ ಕಲಿಯುವ ವಿದ್ಯಾರ್ಥಿಗಳಿಗೆ ಮಾತ್ರ ಗ್ರಾಮೀಣ ಸೇವೆ ಕಡ್ಡಾಯ’ ಮಾಡಲು ಉದ್ದೇಶಿಸಿರುವುದಾಗಿ ತಿಳಿಸಿದೆ.
ಪ್ರತಿಯೊಬ್ಬ ವೈದ್ಯಕೀಯ ವಿದ್ಯಾರ್ಥಿಗೆ ಸರ್ಕಾರ ಸುಮಾರು 6 ಲಕ್ಷ ರು. ವೆಚ್ಚ ಮಾಡುತ್ತಿದೆ. ಆದರೆ, ಈ ವಿದ್ಯಾರ್ಥಿಗಳು ರಾಜ್ಯದಲ್ಲಿ ಸೇವೆ ಸಲ್ಲಿಸಲು ಹಿಂಜರಿಯುತ್ತಾರೆ, ಇದರಿಂದಾಗಿ ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಕಾಡುತ್ತಿದೆ. 2017ನೇ ಸಾಲಿನಲ್ಲಿ ಸುಮಾರು 3 ಸಾವಿರ ವಿದ್ಯಾರ್ಥಿಗಳು ಎಂಬಿಬಿಎಸ್, ಎಂ.ಡಿ ಪದವಿ ಪಡೆದಿದ್ದು, ಕೇವಲ 18 ವಿದ್ಯಾರ್ಥಿಗಳು ಮಾತ್ರ ಗ್ರಾಮೀಣ ಸೇವೆ ಆಯ್ಕೆ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com