ಬೆಂಗಳೂರು: ಪದವಿ ಸರ್ಟಿಫಿಕೇಟ್ ನೀಡುವುದಾಗಿ ನಂಬಿಸಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಖಾಸಗಿ ಶಿಕ್ಷಣ ಸಂಸ್ಥೆ ಆಕಾಶ್ ಇಂಟರ್ ನ್ಯಾಷನಲ್ ಮ್ಯಾನೇಜ್ ಮೆಂಟ್ ವಿರುದ್ಧ ಕೇಸು ದಾಖಲಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಈ ಕಾಲೇಜಿನ ಆಡಳಿತ ವಿಭಾಗದ ಸದಸ್ಯ ಸಾದಿಕ್ ಜಾಫರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಧ್ಯೆ ಸಂಸ್ಥೆಯ ಮುಖ್ಯಸ್ಥ ಸಹ್ನ್ವಾಜ್ ಮತ್ತು ಟ್ರಸ್ಟಿ ಸರ್ಫರಾಜ್ ಇಸ್ಮಾಯಿಲ್ ತಲೆಮರೆಸಿಕೊಂಡಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸದಿದ್ದರಿಂದ ವಿದ್ಯಾರ್ಥಿಗಳು ಬೆಂಗಳೂರು ವಿಶ್ವ ವಿದ್ಯಾಲಯವನ್ನು ಸಂಪರ್ಕಿಸಿದ್ದರು. ಕಾಲೇಜು ನಕಲಿ ದಾಖಲೆಗಳನ್ನು ಸಲ್ಲಿಸಿರುವುದರಿಂದ ಫಲಿತಾಂಶ ಪ್ರಕಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು. ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.
ಬಿ.ಕಾಂ, ಬಿಸಿಎ, ಬಿಬಿಎಂ ಮತ್ತು ಕಾಲೇಜಿನ ಉಪನ್ಯಾಸಕರು ಬೆಂಗಳೂರು ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ ಪ್ರೊ.ಕೆ.ಎ.ಲಿಂಗೇ ಗೌಡ ಅವರನ್ನು ಭೇಟಿ ಮಾಡಿ ತಮ್ಮ ಮೂಲ ಅಂಕಪಟ್ಟಿಯನ್ನು ಹಿಂತಿರುಗಿಸುವಂತೆ ಮನವಿ ಮಾಡಿದ್ದಾರೆ.