ಬೆಂಗಳೂರು: ರಾಜ್ಯ ಎಲ್ಲಾ ಐಎಎಸ್ ಅಧಿಕಾರಿಗಳು ಕನ್ನಡದಲ್ಲೇ ವ್ಯವಹರಿಸಬೇಕೆಂದು ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ದೆಹಲಿ ಮೂಲದ ಐಎಎಸ್ ಅಧಿಕಾರಿಯಾಗಿರುವ ಶ್ರೀವತ್ಸ ಕೃಷ್ಣ ಕಳೆದ 10 ವರ್ಷಗಳಿಂದಲೂ ರಾಜ್ಯದಲ್ಲೇ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ತಾವು ಕೆಲಸ ಮಾಡುವ ಇಲಾಖೆಯಲ್ಲಿ ಎಲ್ಲಾ ಹಂತದ ಅಧಿಕಾರಿಗಳಿಗೆ ಇಂಗ್ಲಿಷ್ ನಲ್ಲಿಯೇ ಕಡತಗಳನ್ನು ಸಿದ್ಧಪಡಿಸುವಂತೆ ಸೂಚನೆ ನೀಡಿದ್ದರು.
ಈ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಗಮನಕ್ಕೆ ಬಂದಿತ್ತು. ವಿಚಾರ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಸಿದ್ದರಾಮಯ್ಯ ಅವರು ಶ್ರೀವತ್ಸ ಕೃಷ್ಣ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ 3 ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚನೆ ನೀಡಿದ್ದರು.
ಈ ಹಿನ್ನಲೆಯಲ್ಲಿ ನಿನ್ನೆ ವಿಧಾನಸೌಧದ ಆವರಣವದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿರುವ ಎಲ್ಲಾ ಐಎಎಸ್ ಅಧಿಕಾರಿಗಳು ಕನ್ನಡದಲ್ಲಿಯೇ ವ್ಯವಹರಿಸಬೇಕು. ಕನ್ನಡವನ್ನೇ ಕಡ್ಡಾಯವಾಗಿ ಬಳಕೆ ಮಾಡಬೇಕೆಂದು ತಿಳಿಸಿದರು.
ಶ್ರೀವತ್ಸ ಕೃಷ್ಣ ಅವರು ಇಂಗ್ಲಿಷ್ ನಲ್ಲಿ ಕಡತ ಮಂಡಿಸುವಂತೆ ಆದೇಶ ಮಾಡಿರುವ ಕುರಿತು ಮಾಹಿತಿ ಪಡೆಯುತ್ತೇನೆ. ಬಳಿಕ ಕ್ರಮ ಕೈಗೊಳ್ಳುತ್ತೇನೆಂದು ಹೇಳಿದ್ದಾರೆ.