ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಬರ ಪರಿಹಾರ ನಿರ್ವಹಣೆ ಸರಿಯಾಗಿ ನಡೆಯುತ್ತಿದೆಯೆ ಎಂಬ ಬಗ್ಗೆ ಅಧಿಕಾರಿಗಳು ನಿಗಾ ವಹಿಸಿ ಸರಿಯಾಗಿ ಕೆಲಸ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮತ್ತು ಬರ ಪರಿಸ್ಥಿತಿ ನಿರ್ವಹಣೆ ಕುರಿತು ನಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮುಖ್ಯಮಂತ್ರಿ ಮಾತನಾಡಿದರು. ನೀವು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಮಾರ್ಗದರ್ಶನ ಮಾಡುವುದರಿಂದ ಆಡಳಿತ ಯಂತ್ರ ಇನ್ನಷ್ಟು ಚುರುಕುಗೊಳ್ಳುತ್ತದೆ ಎಂದೂ ಅವರು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಲಹೆ ನೀಡಿದರು.
ಬರ ಪೀಡಿತ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಎಷ್ಟು ಮೇವು ಬೇಕಾಗಬಹುದು ಎಂಬುದನ್ನು ತಿಳಿದುಕೊಳ್ಳಲು ಪ್ರತಿ ಹಳ್ಳಿಯಲ್ಲಿ ಜಾನುವಾರುಗಳ ಗಣತಿ ಮಾಡುವಂತೆ ಹಿಂದೆಯೇ ಸೂಚನೆ ನೀಡಲಾಗಿದೆ. ಆ ಕುರಿತು ಗಮನಹರಿಸಿ ಎಂದೂ ಮುಖ್ಯಮಂತ್ರಿ ಆದೇಶ ನೀಡಿದರು.
ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಕ್ಕೆ ಪರಿಹಾರ ಒದಗಿಸುವ ಜೊತೆಗೆ ಮೃತ ರೈತನ ಪತ್ನಿಗೆ ಮಾಸಾಶನ, ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೇವೆ ನೀಡುವ ವಿಚಾರದಲ್ಲಿ ತುರ್ತು ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸಿದರೆ ಕ್ರಮ ಎದುರಿಸಬೇಕಾದೀತು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.