ಏರ್ ಷೋ ವಿವಾದ: ಪ್ರಜೆಗಳ ಭಾವನೆಯನ್ನು ಕೇಂದ್ರ ಗೌರವಿಸುತ್ತದೆ ಎಂದು ಭಾವಿಸಿದ್ದೇನೆ- ಕುಮಾರಸ್ವಾಮಿ

ಏರೋ ಇಂಡಿಯಾ ಏರ್ ಷೋ ಕಾರ್ಯಕ್ರಮದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯದ ಪ್ರಜೆಗಳ ಭಾವನೆಯನ್ನು ಗೌರವಿಸುತ್ತದೆ ಎಂದು ಭಾವಿಸಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಸಿಎಂ ಕುಮಾರಸ್ವಾಮಿ
ಸಿಎಂ ಕುಮಾರಸ್ವಾಮಿ
ಬೆಂಗಳೂರು: ಏರೋ ಇಂಡಿಯಾ ಏರ್ ಷೋ ಕಾರ್ಯಕ್ರಮದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯದ ಪ್ರಜೆಗಳ ಭಾವನೆಯನ್ನು ಗೌರವಿಸುತ್ತದೆ ಎಂದು ಭಾವಿಸಿದ್ದೇನೆ ಎಂದು  ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಲಾಬಿ ಮೇರೆಗೆ ಬೆಂಗಳೂರಿನಲ್ಲಿ ನಡೆಯಬೇಕಿರುವ ಏರೋ ಇಂಡಿಯಾ ಏರ್ ಷೋ ಕಾರ್ಯಕ್ರಮವನ್ನು ಲಖನೌಗೆ ಸ್ಥಳಾಂತರ ಮಾಡಲಾಗುತ್ತದೆ ಎಂಬ ವದಂತಿಗಳ ಕುರಿತು ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ಅವರು, ಈ ಬಗ್ಗೆ ನಾನು ಈಗಾಗಗೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಮಾಹಿತಿ ನೀಡಿದರು.
ನಿನ್ನೆ 72ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏರ್ ಷೋ ಸ್ಥಳಾಂತರಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ನಾನು ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತು ರಕ್ಷಣಾ ಇಲಾಖೆಗೆ ಪತ್ರ ಬರೆದಿದ್ದು, ಬೆಂಗಳೂರಿನಿಂದ ಏರ್ ಷೋ ಸ್ಥಳಾಂತರ ಬೇಡ ಎಂದು ಮನವಿ ಮಾಡಿಕೊಂಡಿದ್ದೇನೆ. ಬಹಶಃ ಕೇಂದ್ರ ಸರ್ಕಾರ ಪ್ರಜೆಗಳ ಭಾವನೆಯನ್ನು ಗೌರವಿಸುತ್ತದೆ ಎಂದು ಭಾವಿಸಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.
ಇನ್ನು ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆ ವಿವಾದದ ಕುರಿತು ಮಾತನಾಡಿದ ಕುಮಾರಸ್ವಾಮಿ ಅವರು, ಉತ್ತರ ಕರ್ನಾಟಕ ರಚನೆಯಾಗಬೇಕು ಎಂದು ದೊಡ್ಡ ಪ್ರಮಾಣದಲ್ಲಿ ಯಾರೂ ಹೇಳುತ್ತಿಲ್ಲ. ಯಾರೋ ಒಂದಿಬ್ಬರು ತಮ್ಮ ಸ್ವಹಿತಾಸಕ್ತಿಗಾಗಿ ಹೇಳಿಕೆ ನೀಡಿದರೆ ಅದಕ್ಕೆ ಮಾನ್ಯತೆ ನೀಡುವ ಅವಶ್ಯಕತೆ ಇಲ್ಲ. ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಕೆಲಸ ಮಾಡುತ್ತಿದೆ. 49 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಲಾಗಿದೆ. ಇದರಿಂದ 20.38 ಲಕ್ಷ ಮಂದಿ ರೈತರಿಗೆ ಅನುಕೂಲವಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com