

ಬೆಂಗಳೂರು: ರಾಜ್ಯದಲ್ಲಿನ ಪ್ರವಾಹ ಪೀಡಿತ ಪ್ರದೇಶಗಳ ಪರಿವೀಕ್ಷಣೆಗಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೂರು ತಂಡಗಳನ್ನು ರಚಿಸಿದ್ದಾರೆ.
ಮಿಥು ಚೆಂಗಪ್ಪ ನೇತೃತ್ವದ ಮೊದಲ ತಂಡ ದಕ್ಷಿಣ, ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಲಿದೆ. ಮಾಜಿ ಸಚಿವ ಬಿ. ಕೆ. ಚಂದ್ರಶೇಖರ್ ನೇತೃತ್ವದಲ್ಲಿನ ತಂಡ ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದೆ. ವೆಂಕಟಮುನಿಯಪ್ಪ ನೇತೃತ್ವದಲ್ಲಿನ ತಂಡ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದೆ.
ಈ ವೀಕ್ಷಕರನ್ನೊಳಗೊಂಡ ತಂಡ ರಾಜ್ಯಾದ್ಯಂತ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ರಸ್ತೆ ಹಾನಿ, ಸಂವಹನ ವ್ಯವಸ್ಥೆ, ಮನೆ, ಶಾಲೆ, ಬೆಳೆ ಹಾನಿ ಕುರಿತಂತೆ ಜನರಿಂದ ಮಾಹಿತಿ ಸಂಗ್ರಹಿಸಿ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕಾರ್ಯ ಮಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಪರಿಣಾಮಕಾರಿ ಪರಿಹಾರ ಕಾರ್ಯಗಳ ಬಗ್ಗೆ ಈ ಈ ತಂಡ ಕೆಪಿಸಿಸಿಗೆ ವರದಿ ಸಲ್ಲಿಸಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.