ರಾಜ್ಯದ ಮೂವರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ: ಸೆ.5ಕ್ಕೆ ಪ್ರಶಸ್ತಿ ಪ್ರದಾನ

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ನೀಡುವ 2017ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಶನಿವಾರ ಘೋಷಣೆ ಮಾಡಿದ್ದು, ರಾಜ್ಯದ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ನೀಡುವ 2017ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಶನಿವಾರ ಘೋಷಣೆ ಮಾಡಿದ್ದು, ರಾಜ್ಯದ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. 
ದೇಶದಾದ್ಯಂತ ಒಟ್ಟು 45 ಶಿಕ್ಷಕರು ಈ ಬಾರಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ಬೆಂಗಳೂರು ಉತ್ತರ ವಿಭಾಗದ ಜಿಲ್ಲ ಉಪನಿರ್ದೇಶಕರ ಕಚೇರಿಗೆ ಇತ್ತೀಚೆಗೆ ವರ್ಗಾವಣೆಗೊಂಡಿರುವ ಶಿಕ್ಷಕಿ ಶೈಲಾ, ಶಿಡ್ಲಘಟ್ಟ ತಾಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಡಾ.ಎಂ.ಶಿವಕುಮಾರ್ ಮತ್ತು ದೇವನಹಳ್ಳಿ ತಾಲೂಕಿನ ವಿಜಯಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ವಿಭಾಗದ ದೈಹಿಕ ಶಿಕ್ಷಕ ಡಾ.ಜಿ.ರಮೇಶಪ್ಪ ಅವರು ಆಯ್ಕೆಯಾಗಿದ್ದಾರೆ. 
ಸೆ.5 ರಂದು ರಾಜಧಾನಿ ದೆಹಲಿಯ ವಿಜ್ಞಾನಭವನದಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ರೂ.50 ಸಾವಿರ ನಗದು, ಬೆಳ್ಳಿ ಪದಕ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ. 
ಕಳೆದ 24 ವರ್ಷಗಳಿಂದ ಶೈಲಾ ಅವರು ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯವನ್ನು ಸರಳವಾಗಿ ಕಲಿಯುವ ವಿಧಾನವನ್ನು ತಿಳಿಸಿಕೊಟ್ಟಿದ್ದಾರೆ. ಈ ಸಾಧನೆ ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. 
ಇನ್ನು ಶಿವಕುಮಾರ್ ಅವರು 14 ವರ್ಷಗಳಿಂದ ಸರ್ಕಾರಿ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಎಂ.ಶಿವಕುಮಾರ್, ಗಣಿತವನ್ನು ಸರಳವಾಗಿ ಅರ್ಥೈಸುವ ಸಲುವಾಗಿ ಹಲವಾರು ವಿಡಿಯೋ, ಮೊಬೈಲ್ ಆ್ಯಪ್ ಗಳನ್ನು ರೂಪಿಸಿದ್ದಾರೆ. ಯೂಟ್ಯೂಬ್ ನಲ್ಲಿ ತಮ್ಮ ಹೆಸರಿನಲ್ಲಿ ಖಾತೆ ತೆಗೆದು ಗಣಿತದ ಲೆಕ್ಕಗಳನ್ನು ಸುಲಭ ರೀತಿಯಲ್ಲಿ ಬಿಡಿಸಿ ವಿದ್ಯಾರ್ಥಿಗಳನ್ನು ಹೆಚ್ಚಿನ ಅಂಕಗಳಿಸುವಂತೆ ಮಾಡಿದ್ದಾರೆ.
ಡಾ.ಜಿ.ರಮೇಶಪ್ಪ ಅವರು ಶಾಲಾ ಮಕ್ಕಳಿಗೆ ಕ್ರೀಡೆ, ಯೋಗ, ಏರೋಬಿಕ್ಸ್, ನೃತ್ಯ ಮುಂತಾದವುಗಳಲ್ಲಿ ಉನ್ನತ ಮಟ್ಟಕ್ಕೆ ಕರೆದೊಯ್ಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯ ಸರ್ಕಾರ ಕೂಡ ಈ ಹಿಂದೆ ರಾಜ್ಯದ ಅತ್ಯುತ್ತಮ ಪ್ರಶಸ್ತಿ ನೀಡಿ ಗೌರವಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com