ಮಂಗಳೂರು: ಈಗಾಗಲೇ ಮಹಾಮಳೆ ಮತ್ತು ಪ್ರವಾಹಕ್ಕೆ ಸಿಲುಕು ನಲುಗಿರುವ ಕೊಡಗು ಹಾಗೂ ಮಂಗಳೂರಿನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಸೋಮವಾರ ಎಚ್ಚರಿಕೆ ನೀಡಿದೆ.
ಈ ಸಂಬಂಧ ಹವಾಮಾನ ಇಲಾಖೆ ಮಂಗಳೂರು ಮತ್ತು ಕೊಡಗು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಎರಡು ಜಿಲ್ಲೆಯ ಕೆಲವು ಭಾಗಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದಾಗಿ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮತ್ತೊಮ್ಮೆ ಮಳೆಯಾಗಲಿದೆ ಎಂದು ಅವರು ಹೇಳಿದ್ದಾರೆ.