ಕರ್ನಾಟಕ ಬಂದ್: ಶಾಲಾ-ಕಾಲೇಜುಗಳಿಗೆ ರಜೆ, ಬಿಗಿ ಪೊಲೀಸ್ ಬಂದೋಬಸ್ತ್

ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 25ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು,...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 25ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.
ಬಂದ್‌ಗೆ ಹಲವು ಕನ್ನಡಪರ ಸಂಘಟನೆಗಳು ಕನ್ನಡ ಚಿತ್ರೋದ್ಯಮ ಸೇರಿದಂತೆ ನೂರಾರು ಸಂಘಟನೆಗಳು, ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.
ಶಾಲಾ-ಕಾಲೇಜುಗಳಿಗೆ ರಜೆ
ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಯಲ್ಲಿ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಧಾರವಾಡದಲ್ಲಿ ಸರ್ಕಾರಿ ಶಾಲಾ ಕಾಲೇಜ್ ಗಳಿಗೆ ರಜೆ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸ್ಥಳೀಯ ಪರಿಸ್ಥಿತಿಯನ್ನಾಧರಿಸಿ ರಜೆ ನೀಡುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. 
ಬಸ್ ಸಂಚಾರದಲ್ಲಿ ವ್ಯತ್ಯಯ
ಕರ್ನಾಟಕ ಬಂದ್ ಗೆ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ಬೆಂಬಲ ನೀಡಲ್ಲವಾದರೂ ಬಸ್‌ಗೆ ಕಲ್ಲು ತೂರಾಟ ಸೇರಿದಂತೆ ಇನ್ನಿತರ ಯಾವುದೇ ಆಸ್ತಿ ಹಾನಿ ಉಂಟಾಗುವ ಸಂಭವ ಸೃಷ್ಠಿಯಾದರೆ ಸುರಕ್ಷತೆ ದೃಷ್ಠಿಯಿಂದ ಬಸ್ ಮತ್ತು ಮೆಟ್ರೊ ರೈಲು ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಈ ಮಧ್ಯೆ, ನಾಳೆಯ ಬಂದ್ ಗೆ ಬೆಂಬಲ ನೀಡಿ ಯಶಸ್ವಿಗೊಳಿಸುವಂತೆ ವಾಟಾಳ್ ನಾಗರಾಜ್ ಅವರು ಇಂದು ಮೈಸೂರು ಬ್ಯಾಂಕ್ ವೃತ್ತದಿಂದ ಮೆಜೆಸ್ಟಿಕ್ ವರೆಗೆ ರ್ಯಾಲಿ ನಡೆಸಿ ಹಾಡಿನ ಮೂಲಕ ಪ್ರಚಾರ ನಡೆಸಿದರು.
ಬೆಂಗಳೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ 50 ಕೆಎಸ್ ಆರ್ ಪಿ ತುಕಡಿ, 15 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಹೋಮ್ ಗಾರ್ಡ್ಸ್, ಕೆಎಆರ್ ತುಕಡಿಯನ್ನು ನಿಯೋಜಿಸಲಾಗುವುದು ಎಂದರು.
ಅಂಗಡಿ, ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com