'ನಮ್ಮ ಮೆಟ್ರೊ' ಯೋಜನೆಗೆ ರಕ್ಷಣಾ ಇಲಾಖೆ ಭೂಮಿ ನೀಡಲು ಸಿಎಂ ಕುಮಾರಸ್ವಾಮಿಗೆ ಕೇಂದ್ರ ಭರವಸೆ

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಅಧಿಕೃತ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಭಾಗಿಯಾದ ...
ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ
ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಅಧಿಕೃತ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಭಾಗಿಯಾದ ಹೆಚ್ ಡಿ ಕುಮಾರಸ್ವಾಮಿ ಭೇಟಿ ಅತ್ಯಂತ ಯಶಸ್ವಿಯಾಗಿದೆ ಎನ್ನಬಹುದು.

ಕೇಂದ್ರ ಸರ್ಕಾರದಿಂದ ರಾಜ್ಯದ ವಿವಿಧ ಇಲಾಖೆಗಳಿಗೆ ಸುಮಾರು 2,500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲು ಒಪ್ಪಿಗೆ ಪಡೆದಿದ್ದಾರೆ. ಬೆಂಗಳೂರಿನಲ್ಲಿ ನಮ್ಮ ಮೆಟ್ರೊ ಯೋಜನೆಗೆ ಸರ್ಕಾರದ ಭೂಮಿಯನ್ನು ಪಡೆಯುವಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅವರಿಂದ ಒಪ್ಪಿಗೆ ಪಡೆದುಕೊಂಡಿದ್ದಾರೆ.

ನಿನ್ನೆ ದಿನವಿಡೀ ಸಭೆಯಲ್ಲಿ ನಿರತರಾಗಿದ್ದ ಮುಖ್ಯಮಂತ್ರಿಗಳು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್, ಕೇಂದ್ರ ಆಹಾರ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್, ಕೃಷಿ ಸಚಿವ ರಾಧಾ ಮೋಹನ್ ಸಿಂಗ್, ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮೆಟ್ರೊ ಜಾಲವನ್ನು ವಿಸ್ತರಿಸಲು ಮತ್ತು ಮೆಟ್ರೊ ನಿಲ್ದಾಣಗಳ ನಿರ್ಮಾಣಕ್ಕೆ ಭೂಮಿಯ ಅವಶ್ಯಕತೆಯಿದೆ. ಅದು ರಕ್ಷಣಾ ಸಚಿವಾಲಯಕ್ಕೆ ಸೇರಿದ ಜಾಗವಾಗಿತ್ತು. ಈ ಭೂಮಿಯನ್ನು ಒದಗಿಸಿಕೊಡುವಂತೆ ಸಚಿವೆ ನಿರ್ಮಲಾ ಸೀತಾರಾಮ್ ಅವರಲ್ಲಿ ಮನವಿ ಮಾಡಿಕೊಂಡಾಗ ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಸಂಗ್ರಹಕ್ಕೆ ಬೆಂಬಲ ಬೆಲೆ ನೀಡಲು ಕೇಂದ್ರ ಸರ್ಕಾರದಿಂದ 954 ಕೋಟಿ ರೂಪಾಯಿ ಬಾಕಿ ಹಣವನ್ನು ಪಡೆಯುವಲ್ಲಿ ಕೂಡ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಪಾಸ್ವಾನ್ ಈ ಸಂಬಂಧ ಅಗತ್ಯ ಆದೇಶ ಹೊರಡಿಸಿದ್ದಾರೆ ಎಂದರು.

ಹಾಸನ, ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೆಗಾ ಡೈರಿ ಸ್ಥಾಪಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶಂಸಿಸಿದ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಇದಕ್ಕೆ 900 ಕೋಟಿ ರೂಪಾಯಿ ಹಣ ಒದಗಿಸುವ ಭರವಸೆ ನೀಡಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಯೋಜನೆ ತ್ವರಿತ ಜಾರಿಗೆ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com