ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ) ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ.
ಹಂತಕನಿಗೆ ಆಶ್ರಯ ನೀಡಿದ ಆರೋಪದ ಮೇಲೆ ಎಚ್ ಎಲ್ ಸುರೇಶ್(36) ಎಂಬುವವರನ್ನು ಪೊಲೀಸರು ನಿನ್ನೆ ತುಮಕೂರಿನಲ್ಲಿ ಬಂಧಿಸಿದ್ದಾರೆ.
ಆರೋಪಿಯನ್ನು ಇಂದು ಹೆಚ್ಚುವರಿ ಮುಖ್ಯ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಎಸ್ ಐಟಿ ಪ್ರಕಟಣೆಯಲ್ಲಿ ತಿಳಿಸಿದೆ.
ಗೌರಿ ಲಂಕೇಶ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ, ಪ್ರಮುಖ ಆರೋಪಿ, ಪರಶುರಾಮ್ ವಾಘ್ಮೋರೆಗೆ ಸುರೇಶ್ ಆಶ್ರಯ ನೀಡಿದ್ದ ಎಂದು ಎಸ್ ಐಟಿ ಮೂಲಗಳು ತಿಳಿಸಿವೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡ ಇದುವರೆಗೆ 11 ಶಂಕಿತ ಆರೋಪಿಗಳನ್ನು ಬಂಧಿಸಿದೆ.