ಬೆಂಗಳೂರು: ಜುಲೈ ಮೊದಲ ವಾರದಲ್ಲಿ ಮಂಡಿಸಲಿರುವ ರಾಜ್ಯ ಬಜೆಟ್ ನಲ್ಲಿ ರೈತರ ಕೃಷಿ ಸಾಲ ಮನ್ನಾ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬುಧವಾರ ಹೇಳಿದ್ದಾರೆ.
ಆದಿಚುಂಚನಗಿರಿ ಮಠದಲ್ಲಿರುವ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಅಮವಾಸ್ಯೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇತರೆ ಪಕ್ಷಗಳ ನಾಯಕರಂತೆ ನಾನು ಪಾಲಾಯನವಾದಿ ಅಲ್ಲ. ಕಳೆದ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ಬದ್ಧ ಎಂದರು.
ಅಧಿಕಾರಿಗಳೊಂದಿಗೆ ಚರ್ಚಿಸಿ ರಾಜ್ಯದ ರೈತರು ವಿವಿಧ ಬ್ಯಾಂಕ್ ಗಳಿಂದ ಪಡೆದ ಸಾಲದ ವಿವರನ್ನು ಪಡೆದಿದ್ದೇನೆ. ಬಜೆಟ್ ಮಂಡಿಸುವ ವೇಳೆ ಈ ಕುರಿತು ಸೂಕ್ತ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ತಿಳಿಸಿದ್ದಾರೆ.
ಸಾಲ ಮನ್ನಾದ ಬಗ್ಗೆ ರೈತರು ಆತಂಕಪಡುವ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವ ಅಗತ್ಯ ಇಲ್ಲ. ಸೂಕ್ತ ನಿರ್ಧಾರ ತೆಗೆದುಕೊಳ್ಳುವವರೆಗೆ ತಾಳ್ಮೆಯಿಂದ ಕಾಯಬೇಕು ಎಂದರು.
ಇನ್ನು ರೈತರ ಸಾಲ ಮನ್ನಾ ಮಾಡುವುದಕ್ಕೆ ನಮ್ಮ ಪಕ್ಷದ ವಿರೋಧ ಇಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಅಧಿಕಾರಿಗಳ ಜೊತೆಗಿನ ಸಭೆ ವೇಳೆ ಸಿಎಂ ಕುಮಾರಸ್ವಾಮಿ ಅವರು ಸಹಕಾರಿ ಹಾಗೂ ರಾಷ್ಟ್ರೀಯ ಬ್ಯಾಂಕುಗಳಲ್ಲಿನ ರೈತರ ಸಾಲಮನ್ನಾ ಬಗ್ಗೆ ಸಂಪೂರ್ಣ ವಿವರ ಪಡೆದಿದ್ದಾರೆ. ಇದಕ್ಕೆ ತಕ್ಕಂತೆ ಸಾಲಮನ್ನಾ ಮಾಡಲು ಬೇಕದಾದ ಸಂಪನ್ಮೂಲ ಕ್ರೋಡೀಕರಣಕ್ಕಾಗಿಯೇ ಅಧಿಕಾರಿಗಳ ತಂಡವನ್ನೂ ರಚಿಸಿದ್ದಾರೆ ಎನ್ನಲಾಗಿದೆ.
ವಿಧಾನಸಭಾ ಚುನಾವಣೆಗೆ ಮುನ್ನಾ ಜೆಡಿಎಸ್ ನೀಡಿದ್ದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡುವುದಾದರೆ 53 ಸಾವಿರ ಕೋಟಿ ರೂ.ಗಳ ಹೊರೆಯನ್ನು ಸರ್ಕಾರ ಹೊರ ಬೇಕಾಗುತ್ತದೆ. ಈ ದಿಸೆಯಲ್ಲಿ ಚರ್ಚೆ ನಡೆಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಟ್ಟಾರೆ 30 ಸಾವಿರ ಕೋಟಿ ರೂ.ಗಳ ಸಾಲಮನ್ನಾ ಮಾಡಲು ರೂಪು ರೇಷೆ ಸಿದ್ಧಪಡಿಸಿದ್ದಾರೆ. ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.