ಗೌರಿ ಹತ್ಯೆ ಪ್ರಕರಣ: ತನಿಖೆ ನಡೆದಿದೆ, ಪ್ರಕರಣ ಕುರಿತು ಯಾವುದೇ ಮಾಹಿತಿ ಬಹಿರಂಗಪಡಿಸುವುದಿಲ್ಲ- ಗೃಹ ಸಚಿವ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಕುರಿತ ತನಿಖೆ ಪ್ರಗತಿಯಲ್ಲಿದ್ದು, ಈ ಹಂತದಲ್ಲಿ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಶನಿವಾರ ಹೇಳಿದ್ದಾರೆ...
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಕುರಿತ ತನಿಖೆ ಪ್ರಗತಿಯಲ್ಲಿದ್ದು, ಈ ಹಂತದಲ್ಲಿ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಶನಿವಾರ ಹೇಳಿದ್ದಾರೆ.
ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿ ಪರಶುರಾಮ ವಾಗ್ಮೋರೆ ಎಂಬಾತನನ್ನು ಎಸ್ಐಟಿ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಪ್ರತ್ಯಕ್ಷದರ್ಶಿಗಳು ವಾಗ್ಮೋರೆಯನ್ನು ಗುರ್ತಿಸಿದ್ದಾರೆ.
ಈ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಪರಮೇಶ್ವರ್ ಅವರು, ಪ್ರಕರಣ ಕುರಿತ ತನಿಖೆ ಪ್ರಗತಿಯಲ್ಲಿದ್ದು, ಈ ಹಂತದಲ್ಲಿ ನಾನು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ. ನನ್ನ ಯಾವುದೇ ಹೇಳಿಕೆಗಳು ತನಿಖೆ ಮೇಲೆ ಪರಿಣಾಮ ಬೀರುವುದಿಲ್ಲ.
ತನಿಖೆ ಪೂರ್ಣಗೊಂಡ ಬಳಿಕ ಅಧಿಕಾರಿಗಳು ಚಾರ್ಜ್ ಶೀಟ್ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ.