ಬೆಂಗಳೂರು: ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹಾಗೂ ಶಾಸಕ ಸಿ.ಟಿ.ರವಿಯವರಿಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ.
ಟಿಪ್ಪು ಸುಲ್ತಾನ್ ಜಯಂತಿ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಕೆಯಾಗಿತ್ತು.
ಈ ಅರ್ಜಿಯನ್ನು ನಿನ್ನೆ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ಪೀಠವು, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮೂಂದೂಡಿತು. ಅರ್ಜಿದಾರರ ಪರ ವಕೀಲ ಮೂರ್ತಿ ಡಿ, ನಾಯಕ್ ಅವರು ವಾದಿಸಿದ್ದರು.
ಟಿಪ್ಪು ಜಯಂತಿ ಆಚರಣೆ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಿಸಿದರೆ ಅದೇ ಕಾರ್ಯಕ್ರಮದಲ್ಲಿ ಟಿಪ್ಪು ವಿರುದ್ಧ ಘೋಷಣೆ ಕೂಗುತ್ತೇನೆಂದು ಅನಂತ್ ಕುಮಾರ್ ಹೆಗಡೆಯವರು ಈ ಹಿಂದೆ ಹೇಳಿಕೆ ನೀಡಿದ್ದರು. ಇದರಂತೆ ಸಿ.ಟಿ.ರವಿಯವರೂ ಕೂಡ ಕೋಮು ಭಾವನೆ ಕೆರಳಿಸುವ ಟ್ವೀಟ್ ಮಾಡಿದ್ದರು.