ಚುನಾವಣಾ ನೀತಿ ಸಂಹಿತೆ: ಲಿಂಗಾಯತ ಪ್ರತ್ಯೇಕ ಧರ್ಮ, ಪ್ರತ್ಯೇಕ ನಾಡಧ್ವಜದ ಮೇಲೆ ಪರಿಣಾಮ?

ರಾಜ್ಯ ವಿಧಾನಸಬಾ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಭಾರೀ ರಣತಂತ್ರಗಳನ್ನು ಹೆಣೆಯುತ್ತಾ ಜಿದ್ದಾಜಿದ್ದಿನ ಹೋರಾಟಕ್ಕೆ ಸಜ್ಜಾಗುತ್ತಿದೆ...
ಚುನಾವಣಾ ನೀತಿ ಸಂಹಿತೆ ಜಾರಿ: ಲಿಂಗಾಯತ ಪ್ರತ್ಯೇಕ ಧರ್ಮ, ಪ್ರತ್ಯೇಕ ನಾಡಧ್ವಜದ ಮೇಲೆ ಪರಿಣಾಮ?
ಚುನಾವಣಾ ನೀತಿ ಸಂಹಿತೆ ಜಾರಿ: ಲಿಂಗಾಯತ ಪ್ರತ್ಯೇಕ ಧರ್ಮ, ಪ್ರತ್ಯೇಕ ನಾಡಧ್ವಜದ ಮೇಲೆ ಪರಿಣಾಮ?
ಬೆಂಗಳೂರು: ರಾಜ್ಯ ವಿಧಾನಸಬಾ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಭಾರೀ ರಣತಂತ್ರಗಳನ್ನು ಹೆಣೆಯುತ್ತಾ ಜಿದ್ದಾಜಿದ್ದಿನ ಹೋರಾಟಕ್ಕೆ ಸಜ್ಜಾಗುತ್ತಿದೆ. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಲಿಂಗಾಯತ ಪ್ರತ್ಯೇಕ ಧರ್ಮ, ಪ್ರತ್ಯೇಕ ನಾಡಧ್ವಜ ಮೇಲೂ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ರಾಜ್ಯ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ಮತದಾರರನ್ನು ಒಲಿಸಿಕೊಳ್ಳಲು ಲಿಂಗಾಯತ ಪ್ರತ್ಯೇಕ ಧರ್ಮ ಹಾಗೂ ಪತ್ಯೇಕ ನಾಡಧ್ವಜ ವಿಚಾರಗಳನ್ನು ತಮ್ಮ ಅಸ್ತ್ರವಾಗಿ ಬಳಸಿಕೊಳ್ಳಲು ಮುಂದಾಗಿತ್ತು. 
ರಾಜ್ಯ ಸರ್ಕಾರ ಲಿಂಗಾಯತ ಹಾಗೂ ವೀರಶೈವ ಸಮುದಾಯಗಳನ್ನು ಒಡೆಯಲು ಯತ್ನ ನಡೆಸುತ್ತಿದೆ ಎಂದು ವೀರಶೈವ ಹಾಗೂ ವಿರೋಧ ಪಕ್ಷಗಳು ಹಲವು ಆರೋಪಗಳನ್ನು ಮಾಡುತ್ತಿದ್ದರೂ, ಇದಾವುದಕ್ಕೂ ಕಿವಿಗೊಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಐತಿಹಾಸಿಕ ನಿರ್ಧಾರವೊಂದನ್ನು ಕೈಗೊಂಡಿದ್ದರು. ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಹಾಗೂ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಇದೀಗ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ನೀಡುವ ಕುರಿತಂತೆ ನಿರ್ಧಾರ ಕೈಗೊಳ್ಳುವ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲಿದೆ. 
ಈ ನಡುವೆಯೇ ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದು, ಇದೀಗ ಕೇಂದ್ರ ಸರ್ಕಾರ ಲಿಂಗಾಯತ ಪ್ರತ್ಯೇಕ ಧರ್ಮ ಹಾಗೂ ಪ್ರತ್ಯೇಕ ನಾಡಧ್ವಜ ಕುರಿತಂತೆ ಯಾವುದೇ ರೀತಿಯ ನಿರ್ಧಾರ ಕೈಗೊಂಡರೂ ಅದು ಚುನಾವಣೆ ಮೇಲೆ ನೇರ ಪರಿಣಾಮ ಬೀರಲಿದೆ. ಹೀಗಾಗಿ ಚುನಾವಣೆ ಅಂತ್ಯಗೊಳ್ಳುವವರೆಗೂ ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ಧಾರ ಕೈಗೊಳ್ಳಲು ಮುಂದಾಗುವುದಿಲ್ಲ ಎಂದು ಹೇಳಲಾಗುತ್ತಿದೆ. 
ರಾಜ್ಯದಲ್ಲ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಕೇಂದ್ರ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸಮುದಾಯಗಳ ಆಗ್ರಹಗಳಿಗೆ ಸ್ಪಂದನೆ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗುರಿಯನ್ನು ಸಾಧಿಸಿದ್ದಾರೆ. ಈ ಹಿಂದೆ ಚುನಾವಣಾ ಸಂದರ್ಭದಲ್ಲಿ ಈ ವಿಚಾರ ಸಂಬಂಧ ಬಿಜೆಪಿ ಹಿಂದಕ್ಕೆ ಹೆಜ್ಜೆ ಹಾಕಿತ್ತು. ಆದರೆ, ಸಿದ್ದರಾಮಯ್ಯ ಅವರು ಇದೀಗ ಸಮುದಾಯಗಳ ನಡುವೆಯೇ ಚರ್ಚೆಯಾಗುವಂತೆ ಮಾಡಿದ್ದಾರೆ. ಬಿಜೆಪಿ ವೋಟ್ ಬ್ಯಾಂಕ್ ರಾಜಕೀಯವನ್ನು ಮೊಟಕುಗೊಳಿಸಲು ಸರ್ಕಾರ ಈ ರೀತಿಯ ನಿರ್ಧಾರವನ್ನು ಕೈಗೊಂಡಿದೆ. ಪ್ರತ್ಯೇಕ ಧರ್ಮ ವಿಚಾರ ಸಂಬಂಧ ಯಾವ ರೀತಿಯಲ್ಲಿ ಯೋಜನೆ ರೂಪಿಸಲಾಗಿದೆ ಎಂಬುದ ಈಗಲೂ ನಮಗೆ ತಿಳಿಯುತ್ತಿಲ್ಲ. ಚುನಾವಣೆಯಲ್ಲಿ ಲಿಂಗಾಯತರು ನಮಗೆ ಬೆಂಬಲ ನೀಡಿದ್ದೇ ಆದರೆ, ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ನಾವು ಗೆಲವು ಸಾಧಿಸಬಹುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಹೇಳಿದ್ದಾರೆ. 
ಇನ್ನು ಪ್ರತ್ಯೇಕ ನಾಡಧ್ವಜ ಸಂಬಂಧ ಕೂಡ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಈ ಕುರಿತಂತೆಯೂ ಯಾವುದೇ ರೀತಿಯ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿಲ್ಲ. ಒಂದು ವೇಳೆ ರಾಜ್ಯದ ವಿರುದ್ಧವಾಗಿ ನಿರ್ಧಾರ ಕೈಗೊಂಡಿದ್ದೇ ಆದರೆ, ಬಿಜೆಪಿ ವಿರುದ್ಧ ಜನತೆ ತಿರುಗಿಬೀಳುವ ಸಾಧ್ಯತೆಗಳಿದ್ದು, ಹೀಗಾಗಿ ಕೇಂದ್ರ ಸರ್ಕಾರ ಪ್ರಸ್ತುತದ ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಳ್ಳುವುದಿಲ್ಲ ಎನ್ನಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com