ರಾಜ್ಯ

ವಿಪಕ್ಷಗಳ ಬಲ ಪ್ರದರ್ಶನಕ್ಕೆ ವೇದಿಕೆಯಾದ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭ

ವಿಪಕ್ಷಗಳ ಬಲ ಪ್ರದರ್ಶನಕ್ಕೆ ವೇದಿಕೆಯಾದ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭ
ಸಂಗ್ರಹ ಚಿತ್ರ
Published On :
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ ಸಲ್ಲಿಕೆ ಮಾಡುತ್ತಿದ್ದಂತೆಯೇ ಇತ್ತ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೆ ವೇದಿಕೆ ಸಜ್ಜಾಗಿದೆ.
ಇದೇ ಬುಧವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರ ಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರು ಸರ್ಕಾರ ರಚನೆ ಕುರಿತಂತೆ ಮಾತುಕತೆ ನಡೆಸಿದರು. ಈ ವೇಳೆ ರಾಜ್ಯಪಾಲ ವಜುಬಾಯ್ ವಾಲಾ ಅವರು ಸರ್ಕಾರ ರಚನೆಗೆ ಅನುಮೋದನೆ ನೀಡಿದ್ದು, ಬಹುಮತ ಸಾಬೀತಿಗೆ 15 ದಿನಗಳ ಕಾಲಾವಕಾಶ ನೀಡಿದ್ದಾರೆ. 
ನಾಳೆಯೇ ಅಂದರೆ ಸೋಮವಾರವೇ ಪ್ರಮಾಣ ವಚನ ಸ್ವೀಕರಿಸುವುದಾಗಿ ಕುಮಾರಸ್ವಾಮಿ ಹೇಳಿದ್ದರಾದರೂ, ನಾಳೆ ರಾಜೀವ್ ಗಾಂಧಿ ಅವರ ಪುಣ್ಯತಿಥಿ ನಿಮಿತ್ತ ಬುಧವಾರಕ್ಕೆ ಪ್ರಮಾಣ ವಚನ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿದ್ದಾರೆ. 
ವಿಪಕ್ಷಗಳ ಬಲ ಪ್ರದರ್ಶನಕ್ಕೆ ವೇದಿಕೆಯಾದ ಪ್ರಮಾಣ ವಚನ ಸ್ವೀಕಾರ
ಇನ್ನು ಕುಮಾರಸ್ವಾಮಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಇದೀಗ ವಿಪಕ್ಷಗಳ ಬಲ ಪ್ರದರ್ಶನದ ಪ್ರಮುಖ ವೇದಿಕೆಯಾಗಿ ಮಾರ್ಪಟ್ಟಿದ್ದು, ಕಾರ್ಯಕ್ರಮಕ್ಕೆ ಪಶ್ಚಿಮ ಬಂಗಾಳ ಸಿಎಂ ಹಾಗೂ ತೃಣಮೂಲ ಕಾಂಗ್ರೆಸ್ ನ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ತೆಲಂಗಾಣ ಮುಖ್ಯಮಂತ್ರಿ ಮತ್ತು ಟಿಆರ್ ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಉಪಸ್ಥಿತರಾಗುವ ಸಾಧ್ಯತೆ ಇದೆ.
ಅಂತೆಯೇ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರೂ ಕೂಡ ಹಾಜರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ಈ ಎಲ್ಲ ಗಣ್ಯರಿಗೆ ಆಹ್ವಾನ ನೀಡುವುದಾಗಿ ಹೇಳಿದ್ದಾರೆ. ಅಂತೆಯೇ ಸದನದಲ್ಲಿ ಬಹುಮತ ಸಾಬೀತು ಪಡಿಸುವ ದಿನಾಂಕವನ್ನು ಆದಷ್ಟು ಬೇಗನೆ ನಿರ್ಧರಿಸಲಾಗುವುದು ಎಂದು ಕುಮಾರ ಸ್ವಾಮಿ ಹೇಳಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.