ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನನ್ನನ್ನು ಜೈಲಿಗೆ ಕಳುಹಿಸುವ ಮೂಲಕ ನನ್ನ ವಿರುದ್ಧದ 12 ವರ್ಷಗಳ ಹಿಂದಿನ ದ್ವೇಷವನ್ನು ತೀರಿಸಿಕೊಂಡಿದ್ದಾರೆ ಎಂದು ಬುಧವಾರ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.
ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಜನಾರ್ದನ ರೆಡ್ಡಿಗೆ ಇಂದು ಜಾಮೀನು ಸಿಕ್ಕಿದ್ದು, ಸಂಜೆ ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ದೋಸ್ತಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಸಲ್ಲದ ಆರೋಪ ಹೊರಿಸಿ ಜೈಲಿಗೆ ತಳ್ಳಿದೆ. ನನ್ನ ವಿರುದ್ಧ ಷಡ್ಯಂತ್ರ ನಡೆಸಿದೆ. ಪ್ರಾಮಾಣಿಕ ಅಧಿಕಾರಿಗಳನ್ನು ಬಳಸಿಕೊಂಡು ಕುಮಾರಸ್ವಾಮಿ ಸ್ವತಃ ಈ ಷಡ್ಯಂತ್ರ ರೂಪಿಸಿದ್ದಾರೆ ಎಂದು ರೆಡ್ಡಿ ಆರೋಪಿಸಿದ್ದಾರೆ.
2006ರಲ್ಲಿ ನಾನು ಕುಮಾರಸ್ವಾಮಿ ವಿರುದ್ಧ 150 ಕೋಟಿ ರುಪಾಯಿ ಲಂಚದ ಆರೋಪ ಮಾಡಿದ್ದೆ. ಆ ನಂತರ ಅವರು ನನ್ನ ಮೇಲೆ ಸುಳ್ಳು ಕೇಸ್ ಹಾಕಿದ್ದರು. ಜನಾರ್ದನ ರೆಡ್ಡಿಯನ್ನು ಬಂಧನ ಮಾಡಬೇಕು ಎಂಬುದು ಅವರ ಆಸೆಯಾಗಿತ್ತು. ಅದನ್ನು 12 ವರ್ಷಗಳ ನಂತರ ನನ್ನನ್ನು ಬಂಧಿಸುವ ಮೂಲಕ ಆ ಆಸೆಯನ್ನು ಪೂರೈಸಿಕೊಂಡಿದ್ದಾರೆ ಎಂದು ರೆಡ್ಡಿ ವಾಗ್ದಾಳಿ ನಡೆಸಿದರು.