ಮಂಡ್ಯ ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರು. ಪರಿಹಾರ ಘೋಷಿಸಿದ ಸಿಎಂ

ಮಂಡ್ಯ ಜಿಲ್ಲೆ ಪಾಂಡವಪುರದ ವಿಸಿ ನಾಲೆಗೆ ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ 25 ಮಂದಿ ಮೃತಪಟ್ಟಿದ್ದು...
ಘಟನಾ ಸ್ಥಳಕ್ಕೆ ಎಚ್ ಡಿ ಕುಮಾರಸ್ವಾಮಿ ಭೇಟಿ
ಘಟನಾ ಸ್ಥಳಕ್ಕೆ ಎಚ್ ಡಿ ಕುಮಾರಸ್ವಾಮಿ ಭೇಟಿ
ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರದ ವಿಸಿ ನಾಲೆಗೆ ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ 25 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಲಾ 5 ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ
ಭೀಕರ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಕುಮಾರಸ್ವಾಮಿ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಮಂಡ್ಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ ತಿಳಿಸಿದರು.
ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ ಸಿಎಂ, ಘಟನೆಯಿಂದ ಮನಸ್ಸಿಗೆ ತೀವ್ರ ದುಃಖವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬದವರಿಗೆ ದುಃಖ ಬರಿಸಲು ದೇವರು ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಗ್ರಾಮೀಣ ಪ್ರದೇಶಕ್ಕೆ ಸರ್ಕಾರ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿತ್ತು. ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 25 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ.
ಸಿಎಂ ಭೇಟಿಯ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ, ಶಾಸಕಾದ ರವಿಂದ್ರ ಶ್ರೀಕಂಠಯ್ಯ ಹಾಜರಿದ್ದರು. ನಾಲೆಯಿಂದ ಬಸ್ ಅನ್ನು ಮೇಲಕ್ಕೆತ್ತಲಾಗಿದ್ದು, ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com