ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೆಚ್ಚಿದ ಪ್ರಯಾಣಿಕರ ಸಂಖ್ಯೆ: 2ನೇ ತ್ರೈಮಾಸಿಕದಲ್ಲಿ ಶೇ.28 ವೃದ್ಧಿ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, 3 ತಿಂಗಳುಗಳಲ್ಲಿ 8.13 ದಶಲಕ್ಷ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ...
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, 3 ತಿಂಗಳುಗಳಲ್ಲಿ 8.13 ದಶಲಕ್ಷ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
2018-19 ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ 6.6 ದಶಲಕ್ಷ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಬಳಸಿದ್ದು, ವಾರ್ಷಿಕ ಶೇ.28.1ರಷ್ಟು ಪ್ರಗತಿ ಸಾಧಿಸುವ ಮೂಲಕ ದಾಖಲೆ ನಿರ್ಮಿಸಿದೆ.
ಸೆಪ್ಟೆಂಬರ್ 30ಕ್ಕೆ ಅಂತ್ಯವಾದ ಪ್ರಸಕ್ತ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಒಟ್ಟಾರೆ 8.13 ದಶಲಕ್ಷ ಪ್ರಯಾಣಿಕರು ಬಂದು ಹೋಗಿದ್ದಾರೆ. 2017-18 ರಲ್ಲಿ ಇದೇ ಅವಧಿಯಲ್ಲಿ 6.35 ದಶಲಕ್ಷ ಪ್ರಯಾಣಿಕರು ವಿಮಾನ ನಿಲ್ದಾಣ ಬಳಸಿದ್ದಾರೆಂದು ತಿಳಿದುಬಂದಿದೆ.
ಇದರಲ್ಲಿ 7.07 ದಶಲಕ್ಷ ಪ್ರಯಾಣಿಕರು ದೇಶೀ ಹಾಗೂ 1.06 ಪ್ರಯಾಣಿಕರು ಅಂತರಾಷ್ಟ್ರೀಯ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಬಳಸಿದ್ದಾರೆ. ಇದೇ ಸಮಯದಲ್ಲಿ ವೈಮಾನಿಕ ಸಂಚಾರದಲ್ಲಿ ಶೇ.23.4ರಷ್ಟು ವೃದ್ದಿ ಕಂಡುಬಂದಿದೆ. ಈ ಅವಧಿಯಲ್ಲಿ ಒಟ್ಟಾರೆಯಾಗಿ 59,184 ಲ್ಯಾಂಡಿಂಗ್ ಹಾಗೂ ಟೇಕಾಫ್ ಸಂಭವಿಸಿವೆ.