ಭಾರತ್ ಬಂದ್; ಯಾವ್ಯಾವ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ?

ಇಂಧನ ಬೆಲೆ ಏರಿಕೆ ಖಂಡಿಸಿ ವಿಪಕ್ಷಗಳು ಸೋಮವಾರ ಕರೆ ನೀಡಿರುವ 'ಭಾರತ್‌ ಬಂದ್‌' ಹಿನ್ನೆಲೆಯಲ್ಲಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಇಂಧನ ಬೆಲೆ ಏರಿಕೆ ಖಂಡಿಸಿ ವಿಪಕ್ಷಗಳು ಸೋಮವಾರ ಕರೆ ನೀಡಿರುವ 'ಭಾರತ್‌ ಬಂದ್‌' ಹಿನ್ನೆಲೆಯಲ್ಲಿ ಕೊಡಗು,ಬೀದರ್, ಹೊರತುಪಡಿಸಿದಂತೆ ಬಹುತೇಕ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.

ಪರಿಸ್ಥಿತಿ ನೋಡಿಕೊಂಡು ರಜೆ ಘೋಷಿಸುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿತ್ತು. ಹೀಗಾಗಿ ರಾಜ್ಯದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಠಿಯಿಂದಾಗಿ    ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ ಎಂ ವಿಜಯ್ ಶಂಕರ್ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಉಡುಪಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ರಜೆ ಘೋಷಣೆ ಮಾಡಿದ್ದಾರೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲೆ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ರಜೆ ಘೋಷಿಸಿದ್ದಾರೆ.

ತುಮಕೂರು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಸೋಮವಾರ ಸೆ.10 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ ಅವರು ತಿಳಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಬಂದ್ ಹಿನ್ನೆಲೆಯಲ್ಲಿ ಶಾಲೆ, ಕಾಲೇಜಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ರಜೆ ಘೋಷಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಆದೇಶ ಹೊರಡಿಸಿದ್ದಾರೆ‌. ಯಾದಗಿರಿ ಭಾರತ್ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಎಲ್ಲ ಸರಕಾರಿ, ಅನುದಾನಸಹಿತ, ಅನುದಾನ ರಹಿತ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಡಿ.ಎಸ್‌.ರಮೇಶ್‌ ಆದೇಶಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ತಿಳಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಿಸಿ ವೆಂಕಟೇಶ್ ಕುಮಾರ್ ರಜೆ ಘೋಷಿಸಿದ್ದಾರೆ. ಗುಲ್ಬರ್ಗ ವಿವಿ ಸಂಸ್ಥಾಪನಾ ದಿನಾಚರಣೆ ರದ್ದುಪಡಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಶಾಲೆ, ಕಾಲೇಜ್‍ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಜಿ. ಶಾಂತಾರಾಮ ಆದೇಶಿಸಿದ್ದಾರೆ. ಆದರೆ ಸರಕಾರಿ ಕಚೇರಿಗಳು ಕಾರ್ಯ ನಿರ್ವಹಿಸಲಿವೆ.

ಚಾಮರಾಜನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವುದಾಗಿ ಜಿಲ್ಲಾಧಿಕಾರಿಕಾರಿ ಬಿ.ಬಿ.ಕಾವೇರಿ ತಿಳಿಸಿದ್ದಾರೆ.ರಾಯಚೂರಿನಲ್ಲೂ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಕಾರಿ ಡಾ.ಬಗಾದಿ ಗೌತಮ್ ರಜೆ ಘೋಷಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಸೋಮವಾರ ಭಾರತ ಬಂದ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ರಜೆ ಘೋಷಣೆ ಮಾಡಿದ್ದಾರೆ.


ಬೀದರ್​ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಧಿಕೃತವಾಗಿ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com