

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಇದರಿಂದ ಯಾರಿಗೂ ಏನೂ ತೊಂದರೆ ಆಗುವುದಿಲ್ಲ. ಆದರೂ ಸಮಾಜದ ಒಂದು ವರ್ಗದ ಜನ ಪ್ರತಿಭಟನೆ ಹೆಸರಿನಲ್ಲಿ ಕಿಚ್ಚು ಹಚ್ಚುತ್ತಿದ್ದು ಇದರ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಕಿತಾಪತಿಯಿಂದ ರಾಜ್ಯದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಯು.ಟಿ. ಖಾದರ್ ಅಂಥ ನಾಯಕರ ಕೈವಾಡದಿಂದ ಗಲಾಟೆಯಾಗುತ್ತಿದೆ. ಮುಸಲ್ಮಾನರ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ. ಈ ಸಂದರ್ಭದಲ್ಲಿ ಎಲ್ಲರೂ ಶಾಂತಿ ಕಾಪಾಡಬೇಕು. ಕಾಂಗ್ರೆಸ್ ನಾಯಕರು ಪ್ರತಿಭಟನೆಗೆ ಬೆಂಬಲ ಮುಂದುವರಿಸಿದರೆ ಅದರ ಪರಿಣಾಮವನ್ನು ಮುಂದೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಪ್ರತಿಭಟನೆಗಳು ಹೆಚ್ಚಾಗುತ್ತಿದ್ದು ರಾಜ್ಯದಲ್ಲೂ ತೀವ್ರವಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 3 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿದ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್. ರಾಜು ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಡಾಲರ್ಸ್ ಕಾಲೋನಿಯಲ್ಲಿರುವ ಬಿ.ಎಸ್. ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿದ ಡಿಜಿಪಿ ನೀಲಮಣಿ ಎನ್. ರಾಜು, ರಾಜ್ಯಾದ್ಯಂತ ಪೊಲೀಸ್ ಇಲಾಖೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ನಿಷೇಧಾಜ್ಞೆ ಜಾರಿಯಾಗಿರುವ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚಿನ ಎಚ್ಚರ ವಹಿಸಿ. ತೀವ್ರ ಮಟ್ಟದ ಗಲಾಟೆಗಳು ನಡೆಯದಂತೆ ಮುಂಜಾಗ್ರತೆ ವಹಿಸಿ ಎಂದು ಡಿಜಿಪಿಗೆ ಸಿಎಂ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು ಎಂದು ತಿಳಿದುಬಂದಿದೆ.
ಇದೇವೇಳೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಗುಪ್ತಚರ ಇಲಾಖೆ ಎಡಿಜಿಪಿ ಕಮಲ್ ಪಂಥ್ ಜೊತೆ ಚರ್ಚೆ ನಡೆಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಟ್ಟೆಚ್ಚರ ವಹಿಸಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ. ಪ್ರತಿಭಟನೆ ನಡೆಯುವ ಸ್ಥಳಗಳಲ್ಲಿ ಬಿಗಿ ಭದ್ರತೆಗೆ ವ್ಯವಸ್ಥೆ ಮಾಡಿ ಎಂದು ಆದೇಶ ನೀಡಿದ್ದಾರೆ.
20ಕ್ಕೂ ಅಧಿಕ ಪ್ರತಿಭಟನಾಕಾರರ ಬಂಧನ: ಇನ್ನೊಂದೆಡೆ ಕಲಬುರಗಿಯಲ್ಲಿ ಎಡಪಂಥೀಯ ಮತ್ತು ಮುಸ್ಲಿಂ ಸಂಘಟನೆ ಒಕ್ಕೂಟದ 20ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಿಎಂ ಸಭೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ, ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ಬಿಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈ ಮಧ್ಯೆ ಎಡಪಂಥೀಯರು ಮತ್ತು ಮುಸ್ಲಿಂ ಸಂಘಟನೆಗಳು ನೀಡಿರುವ ಬಂದ್ ಕರೆ ಹಿನ್ನಲೆಯಲ್ಲಿ ಬೆಂಗಳೂರಿನ ಟೌನ್ ಹಾಲ್ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.