

ಬೆಂಗಳೂರು: ಜನವರಿ 20 ರಿಂದ ನಡೆಸಲು ಉದ್ದೇಶಿಸಿದ್ದ ವಿಧಾನಮಂಡಲ ಜಂಟಿ ಅಧಿವೇಶನ ಮುಂದೂಡಲು ನಿರ್ಧಿಸಿದ್ದು, ಫೆಬ್ರವರಿ 17 ರಂದು ಜಂಟಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಮಾಧುಸ್ವಾಮಿ ಅವರು 2020ರ ಜನವರಿ 20 ರಿಂದ 30 ರವರೆಗೆ ನಡೆಸಲು ತೀರ್ಮಾನಿಸಲಾಗಿದ್ದ ಅಧಿವೇಶನವನ್ನು ಮೂಂದೂಡಲಾಗಿದೆ. ಮಾರ್ಚ್ 5 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಹೇಳಿದರು.
ಫೆ. 17ರಿಂದ 21 ರವರೆಗೆ ಅಧಿವೇಶನ ನಡೆಯಲಿದ್ದು, 17 ರಂದು ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲ ಅವರು ಭಾಷಣ ಮಾಡಲಿದ್ದಾರೆ. ಮಾರ್ಚ್ 2 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 5ರಂದು ಹಣಕಾಸು ಇಲಾಖೆ ಜವಾಬ್ದಾರಿ ಹೊಂದಿರುವ ಸಿಎಂ ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಿದರು.