

ಬೆಂಗಳೂರು: ಕರ್ನಾಟಕ ರಾಜ್ಯದ ಒಂದಿಂಚು ಭೂಮಿ ಕಬಳಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಗಡಿಭಾಗದ ಕನ್ನಡಿಗರು ಆತಂಕ ಪಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಹಾಜನ್ ಆಯೋಗದ ವರದಿ ಯಾವ ಭಾಗ ಯಾವ ರಾಜ್ಯಕ್ಕೆ ನೀಡಬೇಕೆಂದು ಸ್ಪಷ್ಟವಾಗಿ ಹೇಳಿದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಶಿವಸೇನೆ ವಿವಾಸ ಸೃಷ್ಟಿಸುತ್ತಿರುವುದು ಸರಿಯಲ್ಲ. ರಾಜ್ಯದ ಒಂದಿಂಚು ಭೂಮಿ ಕಬಳಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯದ ಗಡಿಯಲ್ಲಿ ಶಾಂತಿ ಕಾಪಾಡಲು ಸರ್ಕಾರ ಬದ್ಧವಾಗಿದೆ. ಗಡಿ ನಿಗದಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಗಡಿ ವಿಚಾರದಲ್ಲಿ ಶಿವಸೇನೆ ಸೃಷ್ಟಿಸುತ್ತಿರುವ ಗೊಂದಲಗಳಿಗೆ ಸೂಕ್ತ ರೀತಿಯಲ್ಲಿಯೇ ಉತ್ತರ ನೀಡುತ್ತೇವೆ. ಬೆಳಗಾವಿ ಜಿಲ್ಲೆಯಲ್ಲಿರುವ ಯಾರೊಬ್ಬರು ನಾಡದ್ರೋಹದ ಕೆಲಸಕ್ಕೆ ಕೈಹಾಕಬಾರದು. ಗಡಿ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುಲು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜನರು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.