ಬೆಂಗಳೂರು: ಹೈಕೋರ್ಟ್ ನೀಡಿರುವ ಆದೇಶದ ಪ್ರಕಾರ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿರುವ ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ನೆಲಸಮಗೊಳಿಸಬೇಕಾಗಿದೆ.
ಸುಪ್ರೀಂ ಕೋರ್ಟ್ 2009ರ ಸೆಪ್ಟೆಂಬರ್ 9ರಂದು ನೀಡಿರುವ ಆದೇಶದ ಪ್ರಕಾರ, ರಾಜ್ಯ ಸರ್ಕಾರ ಇದುವರೆಗೆ ಕ್ರಮ ಕೈಗೊಳ್ಳದಿದ್ದರೆ ಇನ್ನು ಮುಂದಾದರೂ ಸಾರ್ವಜನಿಕ ಸರ್ಕಾರಿ ಸ್ಥಳಗಳಲ್ಲಿರುವ ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ನೆಲಸಮಗೊಳಿಸಬೇಕು ಎಂದು ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕ ಮತ್ತು ನ್ಯಾಯಮೂರ್ತಿಗಳಾದ ಹೆಚ್ ಟಿ ನರೇಂದ್ರ ಪ್ರಸಾದ್ ನೇತೃತ್ವದ ವಿಭಾಗೀಯ ಪೀಠ, ರಾಜ್ಯದಲ್ಲಿರುವ ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ನೆಲಸಮ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿಲ್ಲ ಎಂದು ಸಲ್ಲಿಸಲಾಗಿದ್ದ ಸ್ವಪ್ರೇರಿತ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.
ಸಾರ್ವಜನಿಕ ಸ್ಥಳಗಳು, ಉದ್ಯಾನವನ, ರಸ್ತೆಗಳಲ್ಲಿ ದೇವಸ್ಥಾನ, ಚರ್ಚ್, ಮಸೀದಿಗಳನ್ನು ಕಟ್ಟಬಾರದು ಎಂದು ಸುಪ್ರೀಂ ಕೋರ್ಟ್ 2009ರಲ್ಲಿ ಆದೇಶ ನೀಡಿತ್ತು.