ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ: ನಿರ್ಮಲಾ ಸೀತಾರಾಮನ್ ಗೆ ಧನ್ಯವಾದ ಎಂದ ಕುಮಾರಸ್ವಾಮಿ
13 ಪ್ರಾದೇಶಿಕ ಭಾಷೆಗಳಲ್ಲಿ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ - ಆರ್ ಆರ್ ಬಿ ನೇಮಕಾತಿ ಪರೀಕ್ಷೆ ಬರೆಯುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಕಟಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಧನ್ಯವಾದ ಸಲ್ಲಿಸಿದ್ದಾರೆ.
ಬೆಂಗಳೂರು: 13 ಪ್ರಾದೇಶಿಕ ಭಾಷೆಗಳಲ್ಲಿ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ - ಆರ್ ಆರ್ ಬಿ ನೇಮಕಾತಿ ಪರೀಕ್ಷೆ ಬರೆಯುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಕಟಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಧನ್ಯವಾದ ಸಲ್ಲಿಸಿದ್ದಾರೆ. ಇದರಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.
ಆದಾಗ್ಯೂ, ಪ್ರಾದೇಶಿಕ ಭಾಷೆಗಳಲ್ಲಿ 10 ನೇ ತರಗತಿಯವರೆಗೂ ವ್ಯಾಸಂಗ ಮಾಡಿದವರು ಹುದ್ದೆಗೆ ಅರ್ಹರಾಗುವಂತೆ ಮಾಡಬೇಕು, ಇದರಿಂದಾಗಿ ಗ್ರಾಮೀಣ ಭಾಗದಿಂದ ಬಂದಂತವರು ನೌಕರಿ ಪಡೆಯಲು ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕನ್ನಡದಲ್ಲೂ ಬ್ಯಾಂಕಿಂಗ್ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಅವಕಾಶ ಮಾಡಿಕೊಡುವಂತೆ ಮಾಡಿದ್ದ ಮನವಿಗೆ ಸ್ಪಂದಿಸಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಇದರಿಂದಾಗಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಸಂಖ್ಯಾತ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
I thank finance minister @nsitharaman for responding to our request to allow banking job aspirants from the state to write bank recruitment tests in #Kannada. Rural candidates will be largely benefitted by this.#IBPS #ResolveIBPS
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿನ ಆಫೀಸರ್ ಸ್ಕೇಲ್ 1 ಹಾಗೂ ಕಚೇರಿ ಸಹಾಯಕ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಹಿಂದಿ , ಇಂಗ್ಲೀಷ್ ಹೊರತುಪಡಿಸಿ 13 ಪ್ರಾದೇಶಿಕ ಭಾಷೆಗಳಲ್ಲಿಯೂ ಬರೆಯಲು ಅವಕಾಶ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಇಂದು ಬೆಳಗ್ಗೆ ಪ್ರಕಟಿಸಿದರು.