ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ನಿರ್ಧರಿಸಿ, ಈ ಸಂಬಂಧ ಆದೇಶ ಹೊರಡಿಸಲಾಯಿತು. ಇದು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿತ್ತು. ಬಿಜೆಪಿ ಕಾರ್ಯಕ್ರಮವನ್ನು ಬಹಿಷ್ಕರಿಸಿ ಪ್ರತಿಭಟನೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿತ್ತು. ಆದರೆ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿಯನ್ನು ಆಚರಿಸುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೂಡ ಟಿಪ್ಪು ಜಯಂತಿಯನ್ನು ಮುಂದುವರಿಸಿದ್ದರು. ಇದೀಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಈ ಹಿಂದೆಯೇ ಬಿಜೆಪಿ ಮುಖಂಡರು, ಪಕ್ಷ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಪಡಿಸುವುದಾಗಿ ಹೇಳಿದ್ದರು. ಇದೀಗ ಈ ನಿಟ್ಟಿನಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.