
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನಡುವೆ ವೇತನ ತಾರತಮ್ಯ ಹಾಗೂ ಸಮನ್ವಯದ ಕೊರತೆಯನ್ನು ಶೀಘ್ರದಲ್ಲೇ ಈ ಸಮಸ್ಯೆಯನ್ನು ಸರಿಪಡಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.
ಬೆಂಗಳೂರಿನ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ನಡೆದ 2018-19ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ನಡುವೆ ವೇತನ ತಾರತಮ್ಯ ಮತ್ತು ಸಮನ್ವಯದ ಕೊರತೆ ಇದ್ದು, ಇದರ ಪರಿಣಾಮ ರೋಗಿಗಳ ಮೇಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಒಂದು ಸಚಿವ ಸ್ಥಾನ ಹೆಚ್ಚಿಸಲೆಂದು ಸರ್ಕಾರ ತೆಗೆದುಕೊಂಡ ನಿರ್ಧಾರದಿಂದ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಬೇರೆ ಬೇರೆ ಎಂಬಂತಾಗಿವೆ. ಆದರೆ ಜಿಲ್ಲಾಸ್ಪತ್ರೆಗಳನ್ನು ಆಯಾ ಜಿಲ್ಲೆಗಳ ವೈದ್ಯಕೀಯ ಕಾಲೇಜುಗಳ ಜೊತೆಗೆ ಸೇರಿಸಲಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ಒಂದೇ ಕಡೆ ಕೆಲಸ ಮಾಡುವ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ವೈದ್ಯಕೀಯ ಕಾಲೇಜು ಸಿಬ್ಬಂದಿ ನಡುವೆ ಸಾಕಷ್ಟು ವೇತನ ತಾರತಮ್ಯ ಇದೆ.
ಈ ರೀತಿಯ ತಾರತಮ್ಯದಿಂದ ವೈದ್ಯರು ಮತ್ತು ಸಿಬ್ಬಂದಿಯಲ್ಲಿ ಭಾರತ-ಪಾಕಿಸ್ತಾನದ ಹಾಗೆ ಕಂದಕ ಸೃಷ್ಟಿಯಾಗುತ್ತಿದೆ. ಇದರ ನೇರ ಪರಿಣಾಮ ರೋಗಿಗಳ ಮೇಲಾಗುತ್ತಿದೆ. ವೈದ್ಯಕೀಯ ಕಾಲೇಜು ಡೀನ್ ಗಳು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಾಗುತ್ತಿದ್ದು, ಇದರಿಂದ ಆರೋಗ್ಯ ಕಾರ್ಯಕ್ರಮಗಳ ಜಾರಿಗೆ ಸಮಸ್ಯೆಗಾತ್ತಿದೆ. ಶೀಘ್ರದಲ್ಲಿಯೇ ಈ ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Advertisement