

ಬಳ್ಳಾರಿ: ಉಪ ಚುನಾವಣೆಯ ಕರಿನೆರಳು ಈ ಬಾರಿಯ ಹಂಪಿ ಉತ್ಸವದ ಮೇಲೆ ಬಿದ್ದಿದ್ದು, ನವೆಂಬರ್ ನಲ್ಲಿ ನಡೆಯಬೇಕಿದ್ದ ಹಂಪಿ ಉತ್ಸವವನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಯುನೆಸ್ಕೋ ವಿಶ್ವ ಪರಂಪರೆ ತಾಣವಾಗಿರುವ ವಿಶ್ವಖ್ಯಾತಿಯ ಐತಿಹಾಸಿಕ ಪ್ರವಾಸಿ ತಾಣ ಹಂಪಿ ಉತ್ಸವ ಇದೇ ನವೆಂಬರ್ ತಿಂಗಳಲ್ಲಿ ನಡೆಯಬೇಕಿತ್ತು. ಆದರೆ, 15 ಕ್ಷೇತ್ರಗಳ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಉತ್ಸವವನ್ನು ಮುಂದೂಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ವಿಜಯನಗರ ಸೇರಿದಂತೆ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಉಪ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಉತ್ಸವವನ್ನು ಉಪ ಚುನಾವಣೆ ಬಳಿಕ ನಡೆಸಲು ನಿರ್ಧರಿಸಲಾಗಿದೆ ಎಂದು ಬಳ್ಳಾರಿ ಉಪ ಆಯುಕ್ತ ಎಸ್ಎಸ್. ನಕುಲ್ ಅವರು ಹೇಳಿದ್ದಾರೆ.
ಈ ನಡುವೆ ಸಚಿವರಾದ ಬಿ.ಶ್ರೀರಾಮುಲು ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ನವೆಂಬರ್ ತಿಂಗಳಿನಲ್ಲೇ ಉತ್ಸವ ನಡೆಸುವ ಭರವಸೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ನಕುಲ್ ಅವರು, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಉತ್ಸವವನ್ನು ನವೆಂಬರ್ ತಿಂಗಳಿನಲ್ಲಿ ನಡೆಸಲು ಸಾಧ್ಯವಾಗುವುದಿಲ್ಲ. ಈ ಬಗ್ಗ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.