ಸಿದ್ಧಾರ್ಥ್ ಸಾವು: ಪೊಲೀಸ್ ತನಿಖೆ ಚುರುಕು, ಐಟಿ ಕಚೇರಿಯಲ್ಲೂ ತನಿಖೆ

ಕೆಫೆ ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕಚೇರಿಗೂ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಕೆಫೆ ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕಚೇರಿಗೂ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಸಿದ್ಧಾರ್ಥ್ ಅವರ ಸಾವಿನ ತನಿಖೆ ನಡೆಸಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಸಿದ್ಧಾರ್ಥ್ ಅವರ ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಪ್ರಸ್ತಾಪ ಕೂಡ ಇದ್ದು, ಇದೇ ಕಾರಣಕ್ಕೆ ಪೊಲೀಸರು ತೆರಿಗೆ ಅಧಿಕಾರಿಗಳ ಕಚೇರಿಗೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ಬೆಂಗಳೂರಿನ ಆದಾಯ ತೆರಿಗೆ ಇಲಾಖೆ ಕಚೇರಿಗೆ ಆಗಮಿಸಿ ಇಲಾಖೆಯ ನಿವೃತ್ತ ಡಿಜಿ ಬಾಲಕೃಷ್ಣ ಅವರ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಸಿದ್ಧಾರ್ಥ್ ಅವರ ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಹಲವು ಮಾಹಿತಿ ಕಲೆಹಾಕಿದ್ದಾರೆ ಎಂದು ತಿಳಿದುಬಂದಿದೆ. 
ಸಿದ್ಧಾರ್ಥ್ ಅವರ ಸಾವಿನ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು, ತನಿಖಾ ತಂಡವೊಂದನ್ನು ರಚಿಸಿದ್ದು, ಸಿಸಿಬಿಯ ಪಿಎಸ್ ಐ ಕಬ್ಬಾಳ್ ರಾಜ್ ನೇತೃತ್ವದ ತಂಡ ದೆಹಲಿಗೆ ಆಗಮಿಸಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾತನಾಡಿರುವ ಪಿಎಸ್ ಐ ಕಬ್ಬಾಳ್ ರಾಜ್ ಅವರು, ಪ್ರಸ್ತುತ ತನಿಖೆ ನಡೆಯುತ್ತಿದ್ದು, ಈ ಸಂಬಂಧ ಯಾವುದೇ ರೀತಿಯ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇತ್ತ ಇದೇ ವಿಚಾರವಾಗಿ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು, ಸಿದ್ಧಾರ್ಥ್ ಸಾವಿನ ಪ್ರಕರಣದ ತನಿಖೆ ಚಾಲ್ತಿಯಲ್ಲಿದ್ದು, ಈ ಸಂಬಂಧ ಯಾವುದೇ ರೀತಿಯ ಮಾಹಿತಿ ನೀಡಲು ಸಾಧ್ಯವಿಲ್ಲ. ತನಿಖೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಹೇಳಿದರು.
ಇನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಸಿದ್ಧಾರ್ಥ್ ಅವರಿಗೆ ಯಾರ ಜತೆಗಾದರೂ ಮನಸ್ತಾಪವಿತ್ತೇ, ಜಗಳವಾಗಿತ್ತೇ, ಒತ್ತಡ-ಖಿನ್ನತೆಗೆ ಒಳಗಾಗಿದ್ದರೇ, ಬೆದರಿಕೆಗಳೇನಾದರೂ ಇತ್ತೇ ಎಂಬಿತ್ಯಾದಿ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ. ಈ ಸಂಬಂಧ ಸಿದ್ಧಾರ್ಥ್ ಅವರ ಕುಟುಂಬಸ್ಥರು, ಆಪ್ತರು ಮತ್ತು ಸಂಸ್ಥೆಯ ಸಿಬ್ಬಂದಿಗಳನ್ನೂ ಕೂಡ ವಿಚಾರಣೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಅಲ್ಲದೆ ಸೋಮವಾರದ ಪ್ರಯಾಣದುದ್ದಕ್ಕೂ ಮೊಬೈಲ್‌ ಕರೆ ವಿವರ ಪೊಲೀಸರು ಕಲೆ ಹಾಕುತ್ತಿದ್ದಾರೆ.
ನಗರ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ಎಸ್‌.ಎಂ. ಕೃಷ್ಣ ಅವರ ಮನೆಗೆ ಭೇಟಿ ನೀಡಿ, ಸಿದ್ಧಾರ್ಥ್ ಅವರ ಪತ್ನಿ ಮತ್ತು ಸಂಬಂಧಿಕರಿಂದ ಮಾಹಿತಿ ಪಡೆದಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರ ಒಂದು ತಂಡವು ಹೆಚ್ಚಿನ ತನಿಖೆಗಾಗಿ ಬೆಂಗಳೂರಿಗೆ ತೆರಳಿದ್ದು, ಸಿದ್ಧಾರ್ಥ್ ಅವರ ಸಂಬಂಧಿಕರನ್ನು ಭೇಟಿಯಾಗಿ ವಿವರ ಪಡೆಯಲಿದೆ. ಅವರ ಕಚೇರಿಗೂ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com