ನೆರೆಗೆ ಈವರೆಗೂ 23 ಬಲಿ, ಪರಿಸ್ಥಿತಿ 'ಆತಂಕಕಾರಿ' ಎಂದ ಸಿಎಂ ಯಡಿಯೂರಪ್ಪ

ಕರ್ನಾಟಕದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಈ ವರೆಗೂ ಸಾವನ್ನಪ್ಪಿರುವವರ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ಕರ್ನಾಟಕದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಈ ವರೆಗೂ ಸಾವನ್ನಪ್ಪಿರುವವರ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿ ಹಾಗೂ ಬಾಗಲಕೋಟೆಯ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ, ಪುನರ್ವಸತಿ ಕೇಂದ್ರದಲ್ಲಿರುವ ಸಂತ್ರಸ್ತರ ಅಳಲು ಆಲಿಸಿದ ಸಿಎಂ ಯಡಿಯೂರಪ್ಪ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸರ್ವೆ ನಡೆಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿ 'ಆತಂಕಕಾರಿ'ಯಾಗಿದೆ ಎಂದು ಹೇಳಿದರು. ಇನ್ನು ಸಿಎಂ ಯಡಿಯೂರಪ್ಪ ಅವರು ನಾಳೆಯಿಂದ ಅವರು ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. 

ಇನ್ನು ಹೇಮಾವತಿ ಜಲಾಶಯದ ಒಳಹರಿವು  92,300 ಕ್ಯೂಸೆಕ್ಸ್ ಗೆ ಏರಿಕೆಯಾಗಿದ್ದು 40,000 ಕ್ಯೂಸೆಕ್ಸ್ ನೀರು ಹರಿಬಿಡಲಾಗಿದೆ.ಜಲಾಶಯದ ತಗ್ಗು ಪ್ರದೇಶದ ಜನರಿಗೆ ಮುಂಜಾಗ್ರತಾ ಕ್ರಮವಾಗಿ  ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಧಿಕಾರಿ ಅಕ್ರಂ ಪಾಷಾ  ಸೂಚಿಸಿದ್ದಾರೆ. ಅಧಿಕೃತ ಮೂಲಗಳ ಪ್ರಕಾರ, ರಾಜ್ಯದಲ್ಲಿ ಇಲ್ಲಿಯವರೆಗೆ ನೆರೆಯಿಂದ 23 ಜನರು ಮೃತಪಟ್ಟಿದ್ದಾರೆ. ಈ ಮಧ್ಯೆ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಅಪಾರ ಹಾನಿಯಾಗಿರುವುದಾಗಿ ವರದಿಯಾಗಿದೆ. ಇಲ್ಲಿ ಹಲವಾರು ಮರಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ವ್ಯತ್ಯಯಗೊಂಡಿದೆ. ರಾಷ್ಟ್ರ ಮತ್ತು ರಾಜ್ಯ ಹೆದ್ದಾರಿಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. 

ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಯಲ್ಲಿ  ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿ ಪ್ರದೇಶದಲ್ಲಿ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಭೂಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಹಾಗೂ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ರಾಜ್ಯದ ಕೃಷ್ಣ, ಮಲಪ್ರಭ, ಘಟಪ್ರಭ, ಬೆಣ್ಣೆಹಳ್ಳ ಹಾಗೂ ಇತರ ಬೃಹತ್ ಹಾಗೂ ಸಣ್ಣ ಪ್ರಮಾಣದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹಲವಾರು ನದಿಗಳು ನೀರಿನಲ್ಲಿ ಮುಳುಗಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com