ಪ್ರವಾಹ ಪರಿಹಾರ ಕಾರ್ಯ ಸಮರ್ಪಕ ಅನುಷ್ಠಾನ ಅಗತ್ಯ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಕುರಿತು ಒಂದು ವಾರದ ಒಳಗಾಗಿ ಸಮೀಕ್ಷೆ ನಡೆಸಿ ವರದಿಯನ್ನು ಸಲ್ಲಿಸಿ, ಪರಿಹಾರ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Published: 14th August 2019 01:36 AM  |   Last Updated: 14th August 2019 01:36 AM   |  A+A-


CM BS Yeddyurappa-floods

ಸಂಗ್ರಹ ಚಿತ್ರ

Posted By : Srinivasamurthy VN
Source : UNI

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಕುರಿತು ಒಂದು ವಾರದ ಒಳಗಾಗಿ ಸಮೀಕ್ಷೆ ನಡೆಸಿ ವರದಿಯನ್ನು ಸಲ್ಲಿಸಿ, ಪರಿಹಾರ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ನೆರೆ ಪರಿಸ್ಥಿತಿ ಕುರಿತು ಅಧಿಕಾರಿಗಳ ಸಭೆ ನಡೆಸಿ ಸಿಎಂ ಸೂಚನೆಗಳನ್ನು ನೀಡಿದರು. ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 7ಮಂದಿಯ ಪ್ರಾಣ ಹಾನಿ ಸಂಭವಿಸಿದ್ದು, ಎಲ್ಲಾ ಪ್ರಕರಣಗಳಲ್ಲಿ ತ್ವರಿತವಾಗಿ ಪರಿಹಾರಧನವನ್ನು ಒದಗಿಸಬೇಕು. ಅತಿವೃಷ್ಟಿಯಿಂದ ಹಾನಿಗೀಡಾದ ಹಾಗೂ ಸಂಪೂರ್ಣ ಬಿದ್ದು ಹೋಗಿರುವ ಮನೆಗಳ ಸಂಖ್ಯೆ, ರಸ್ತೆ, ಸೇತುವೆ, ಕಟ್ಟಡಗಳ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾಗಿರುವ ಹಾನಿಯ ಬಗ್ಗೆ ಸಮರ್ಪಕವಾದ ಸಮೀಕ್ಷೆ ನಡೆಸಬೇಕು. ಕೃಷಿ ಹಾಗೂ ತೋಟಗಾರಿಕೆ ಪ್ರದೇಶ ಹಾಗೂ ಬೆಳೆಗಳಿಗೆ ಹಾನಿಯ ಕುರಿತು ನೆರೆ ನೀರು ಖಾಲಿಯಾದ ಬಳಿಕ ನಿಖರವಾಗಿ ಅಂದಾಜಿಸಬೇಕು ಎಂದು ಹೇಳಿದರು.

ಪ್ರವಾಹ ಪರಿಸ್ಥಿತಿಯ ಪರಿಶೀಲನೆಗಾಗಿ ಇಂದು ಶಿವಮೊಗ್ಗಕ್ಕೆ ಆಗಮಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು,  ಪ್ರವಾಹದಿಂದ ಉಂಟಾಗಿರುವ ನಷ್ಟದ ಬಗ್ಗೆ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಬಳಿಕ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ತೆರೆಯಲಾದ ಪರಿಹಾರ ಕೇಂದ್ರದಲ್ಲಿ ಪ್ರವಾಹ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮದಲ್ಲಿ ಗುಡ್ಡ ಕುಸಿದು, ತೋಟವೆಲ್ಲಾ ನೆಲಸಮವಾಗಿದೆ. ಸುಮಾರು 40 ಎಕರೆಗೂ ಹೆಚ್ಚು ಹೊಲ ಗದ್ದೆಗಳು ನೆಲಸಮವಾಗಿವೆ. ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮಳೆ ಕಡಿಮೆಯಾದ ಬಳಿಕ, ನಾಲ್ಕೈದು ದಿನಗಳಲ್ಲಿ ಈ ಭಾಗದಲ್ಲಿ ಸರ್ವೇ ಮಾಡಿ ವರದಿ ನೀಡಲಿದ್ದಾರೆ. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವರದಿಯನ್ನು ಆಧರಿಸಿ ವಿಶೇಷ ಪ್ಯಾಕೇಜ್ ಘೋಷಿಸಲಾಗುವುದು. ಪ್ರವಾಹದಿಂದಾಗಿ ನಿರಾಶ್ರಿತರಾಗಿರುವ ಕುಟುಂಬಗಳ ಪುನರ್ವಸತಿಗೆ ಸರ್ಕಾರ ಬದ್ಧವಾಗಿದೆ. ಯಾರೂ ಸಹ ವದಂತಿಗಳಿಗೆ ಕಿವಿ ಕೊಡಬಾರದು. ರೈತರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ. ರೈತರಿಗಾಗಿ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಭರವಸೆ ನೀಡಿದರು. 

ಅಂತೆಯೇ ಶಿವಮೊಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ರಸ್ತೆ, ಸೇತುವೆಗಳ ಮರುನಿರ್ಮಾಣಕ್ಕೆ 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಸಿಎಂ ಬಿಎಸ್ ವೈ ಇದೇ ಸಂದರ್ಭದಲ್ಲಿ ಘೋಷಿಸಿದರು.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp