ರೈತರ ಮೇಲೆ ಪೊಲೀಸರ ದೌರ್ಜನ್ಯ; ಕೈಗೊಂಡ ಕ್ರಮಗಳ ವರದಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಮಹದಾಯಿ ನ್ಯಾಯಮಂಡಳಿ ತೀರ್ಪು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ನವಲಗುಂದ ತಾಲ್ಲೂಕಿನ ಯಮನೂರು ರೈತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯದ ಆರೋಪಗಳ ಕುರಿತು ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಮಹದಾಯಿ ನ್ಯಾಯಮಂಡಳಿ ತೀರ್ಪು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ನವಲಗುಂದ ತಾಲ್ಲೂಕಿನ ಯಮನೂರು ರೈತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯದ ಆರೋಪಗಳ ಕುರಿತು ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ರೈತರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯದ ಕುರಿತು ಐಪಿಎಸ್ ಅಧಿಕಾರಿ ಕಮಲ್‌ಪಂತ್ ನೀಡಿದ್ದ ವರದಿ ಅನುಸಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿ ಕಾನೂನು ವಿದ್ಯಾರ್ಥಿನಿ ದೀಕ್ಷಾ ಅಮೃತೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್‌ ಅವರಿದ್ದ ವಿಭಾಗೀಯ ಪೀಠ ಗುರುವಾರ ಈ ನಿರ್ದೇಶನ ನೀಡಿದೆ. 

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎನ್‌.ಪಿ. ಅಮೃತೇಶ್‌, 2016ರ ಜುಲೈ 28ರಂದು ಯಮನೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಮಹದಾಯಿ ನ್ಯಾಯಮಂಡಳಿ ತೀರ್ಪು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಜಲಿಯನ್‌ ವಾಲಾಬಾಗ್ ಹತ್ಯಾಕಾಂಡ ನೆನಪಿಸುವಂತಿದೆ. ಘಟನೆಗೆ ಸಂಬಂಧಿಸಿದ ಸಿಡಿಗಳು ಲಭ್ಯವಿವೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸಿಡಿಯಲ್ಲಿನ ಅಂಶವನ್ನು ಪರಿಶೀಲಿಸಿ ಆ ಕುರಿತು ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಮಾನ ಪತ್ರ ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com