ಆರ್ಥಿಕ ಪರಿಸ್ಥಿತಿ ಸುಭದ್ರ, ತೆರಿಗೆ ಸಂಗ್ರಹದಲ್ಲಿ ಸುಧಾರಣೆ: ಸಿಎಂ ಬಿಎಸ್ ಯಡಿಯೂರಪ್ಪ

ರಾಜ್ಯದಲ್ಲಿ ತೆರಿಗೆ ಸಂಗ್ರಹ ತೃಪ್ತಿಕರವಾಗಿದ್ದು ಕಳೆದ ತಿಂಗಳಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಒಟ್ಟಾರೆ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 

Published: 13th December 2019 05:51 PM  |   Last Updated: 13th December 2019 05:52 PM   |  A+A-


BS Yediyurappa

ಬಿಎಸ್ ಯಡಿಯೂರಪ್ಪ

Posted By : Vishwanath S
Source : UNI

ಬೆಂಗಳೂರು: ರಾಜ್ಯದಲ್ಲಿ ತೆರಿಗೆ ಸಂಗ್ರಹ ತೃಪ್ತಿಕರವಾಗಿದ್ದು ಕಳೆದ ತಿಂಗಳಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಒಟ್ಟಾರೆ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 

ವಿಧಾನಸೌಧದಲ್ಲಿ ಇಲಾಖಾ ಕಾರ್ಯದರ್ಶಿಗಳ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳು ಮತ್ತು ನೆರೆ ಸಂತ್ರಸ್ತರ ಸಮಸ್ಯೆ ನಿವಾರಿಸಲು ಹಣಕಾಸಿನ ತೊಂದರೆ ಇಲ್ಲ. ಬರುವ ದಿನಗಳಲ್ಲಿ ಆರ್ಥಿಕ ಸ್ಥಿತಿ ಇನ್ನಷ್ಟು ಸದೃಢವಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು. 

ರಾಜ್ಯದಲ್ಲಿ ಬೇಸಿಗೆ ಆರಂಭವಾಗುತ್ತಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳು ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಡಿ ನೀರು ಒದಗಿಸುವ ಬಹುತೇಕ ಕಾರ್ಯಕ್ರಮಗಳು ವಿಫಲವಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿ ಗತಿ ಕುರಿತು ಅಧ್ಯಯನ ನಡೆಸಿ ವರದಿ ಹಾಗೂ ಸಲಹೆಗಳನ್ನು ಪಡೆದು ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ವಸತಿ ಯೋಜನೆಗಳನ್ನು ತ್ವರಿತಗೊಳಿಸುವ ಬಗ್ಗೆ ಚರ್ಚೆ ನಡೆಸಿದ್ದು, ಈ ವರ್ಷಾಂತ್ಯದಲ್ಲಿ 1.5 ಲಕ್ಷ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ. ಈ ವರೆಗೆ 1.09 ಲಕ್ಷ ಮನೆ ನಿರ್ಮಾಣವಾಗಿದೆ. ಪ್ರಗತಿಯಲ್ಲಿರುವ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ಆದೇಶಿಸಲಾಗಿದೆ ಎಂದು ಹೇಳಿದರು. 

ಅನುಸೂಚಿತ ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿ ಇರುವ ಎಸ್‍ಸಿಪಿ-ಟಿಎಸ್‍ಪಿ ಯೋಜನೆಯಡಿ 30,444 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಈ ವರೆಗೆ 11,642 ಕೋಟಿ ರೂ.. ಬಿಡುಗಡೆಯಾಗಿ, 9667 ಕೋಟಿ ರೂ. ವೆಚ್ಚವಾಗಿದೆ. ಬರುವ ಮಾರ್ಚ್ 15 ರೊಳಗೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ಬಿಡುಗಡೆಯಾಗಿರುವ ಸಂಪನ್ಮೂಲ ಸದ್ಬಳಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್ ವೆಚ್ಚ ಮತ್ತು ವಿದ್ಯಾರ್ಥಿ ವೇತನವನ್ನು ಸಕಾಲದಲ್ಲಿ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿರುವುದಾಗಿ ಯಡಿಯೂರಪ್ಪ ಹೇಳಿದರು.
 
ಕಾರ್ಮಿಕರ ಪಿಂಚಣಿ ಯೋಜನೆಯಡಿ ಕೇಂದ್ರ ಸರ್ಕಾರ 7 ಲಕ್ಷ ಗುರಿ ನೀಡಿತ್ತು. ರಾಜ್ಯದ 8 ಲಕ್ಷ ಕಾರ್ಮಿಕರಿಗೆ ಪಿಂಚಣಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಿ ಈ ವಲಯದಲ್ಲಿ ಗುರಿ ಮೀರಿ ಸಾಧನೆಮಾಡಲಾಗಿದೆ. ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಡಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಹೆಚ್ಚಿನ ನೆರವು ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಬೆಂಗಳೂರಿನಲ್ಲಿ‌ ಸಂಜೆ ಮತ್ತು ರಾತ್ರಿ ಓಡಾಡುವ ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸೂಕ್ತ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಂಜೆ ಮತ್ತು ರಾತ್ರಿ ವೇಳೆ ಪೋಲೀಸ್ ಗಸ್ತು ಹೆಚ್ಚಿಸಬೇಕು. ರಾತ್ರಿ ವೇಳೆ ಮಹಿಳಾ ಪೋಲೀಸರು ಸಹ ಗಸ್ತು ತಿರುಗುವ ವ್ಯವಸ್ಥೆ ಮಾಡಲು ಸೂಚಿಸಿರುವುದಾಗಿ ಯಡಿಯೂರಪ್ಪ ಹೇಳಿದರು. 

ಬೆಂಗಳೂರಿನ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ‌ ಗಮನ ಹರಿಸಲು ಸೂಚಿಸಿದ್ದು, ಬೆಂಗಳೂರು ಕೆರೆಗಳ ಬಗ್ಗೆ ಅಭಿವೃದ್ಧಿಗೆ ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಬೇಕು. ಬೆಂಗಳೂರನಲ್ಲಿ ಕಸ ಸಮಸ್ಯೆ ಹೆಚ್ಚಾಗಿದ್ದು, ಬೆಂಗಳೂರನ್ನು ಕಸ ಮುಕ್ತ ನಗರವನ್ನಾಗಿ ಮಾಡಲು ಏನೇನು ಕ್ರಮ‌ ಕೈಗೊಳ್ಳಬೇಕೋ ಆ ಎಲ್ಲವನ್ನೂ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿರುವುದಾಗಿ ತಿಳಿಸಿದರು. 

ನೆರೆ ಸಂತ್ರಸ್ತ ಪ್ರದೇಶಗಳಿಗೆ ಹಣ ಬಿಡುಗಡೆಯಾಗಿದ್ದರೂ ಸಹ ಬಹುಪಾಲು ಸಂತ್ರಸ್ತರು ಮನೆ ನಿರ್ಮಿಸಲು ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರದೊಳಗೆ ಜಿಲ್ಲೆಗಳಿಗೆ ಭೇಟಿ ನೀಡಿ, ಸಮಸ್ಯೆ ಪರಿಹರಿಸುವಂತೆ ನಿರ್ದೇಶನ ನೀಡಿದ್ದೇನೆ. ಭೂ ಕುಸಿತ ಹಾಗೂ ಇನ್ನಿತರ ಕಾರಣಗಳಿಂದ ಮನೆ ನಿರ್ಮಿಸಲು ಸಾಧ್ಯವಾಗದ ಕಡೆಗಳಲ್ಲಿ ಪರ್ಯಾಯ ಜಮೀನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಯಡಿಯೂರಪ್ಪ ಹೇಳಿದರು. ಈ ವರೆಗೆ 5.06 ಲಕ್ಷ ರೈತರಿಗೆ 785.94 ಕೋಟಿ ರೂ. ಬೆಳೆ ಪರಿಹಾರ ವಿತರಿಸಲಾಗಿದೆ. ಆದರೆ 37 ಸಾವಿರ ರೈತರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗದ ಕಾರಣ ಪರಿಹಾರ ಪಾವತಿಗೆ ಅಡಚಣೆಯಾಗಿದೆ. ಈ ಬಗ್ಗೆ ಪರ್ಯಾಯ ವಿಧಾನಗಳನ್ನು ಅನುಸರಿಸುವಂತೆ ಸೂಚನೆ ನೀಡಿ ಒಂದು ವಾರದೊಳಗೆ ಹಣ ಪಾವತಿ ಪೂರ್ಣಗೊಳಿಸುವಂತೆ ಸೂಚಿಸಿರುವುದಾಗಿ ತಿಳಿಸಿದರು. 

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಖಾತೆಗಳಿಗೆ ಜಮೆ ಆದ ಇನ್‍ಪುಟ್ ಸಬ್ಸಿಡಿ ಮತ್ತು ಬೆಳೆ ವಿಮೆ ಪರಿಹಾರ ಮೊತ್ತಗಳನ್ನು ಸಾಲ ಖಾತೆಗೆ ಜಮಾ ಮಾಡಲಾಗುತ್ತಿದೆ. ಈ ಬಗ್ಗೆ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿ ಸಭೆಯಲ್ಲಿ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಸೂಚನೆ ನೀಡಲಾಗಿದೆ. ಮತ್ತೊಮ್ಮೆ ಈ ಬಗ್ಗೆ ಲಿಖಿತ ಸೂಚನೆ ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಸಕಾಲ ಯೋಜನೆಯಡಿ ತ್ವರಿತವಾಗಿ ಕಡತ ವಿಲೇವಾರಿ ಆಗಬೇಕು. ಜೊತೆಗೆ ಇತರ ಕಡತಗಳನ್ನು ಒಂದು ವಾರಕ್ಕಿಂತ ಹೆಚ್ಚಿನ ಅವಧಿಗೆ ಬಾಕಿ ಉಳಿಸಬಾರದು. ಎಲ್ಲ ಇಲಾಖೆಗಳಲ್ಲಿ ಇ-ಆಫೀಸ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ಜೆಗೆ ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಯಡಿಯೂರಪ್ಪ ಹೇಳಿದರು.

Stay up to date on all the latest ರಾಜ್ಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp