ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ಮಂಗಳೂರಿನಲ್ಲಿ ಭುಗಿಲೆದ್ದ ಹಿಂಸಾಚಾರ, ಲಾಠಿ ಚಾರ್ಜ್​​​​​​, ಗಾಳಿಯಲ್ಲಿ ಗುಂಡು

ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ
ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಮಂಗಳೂರು: ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರಿನಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿಚಾರ್ಚ್ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಉದ್ರಿಕ್ತರನ್ನು ಚದುರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಬಂದರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮೊದಲು ಅಶ್ರುವಾಯು ಪ್ರಯೋಗಿಸಲಾಗಿತ್ತು. ಆದರೆ ಅದಕ್ಕೂ ಉದ್ರಿಕ್ತ ಗುಂಪು ಬಗ್ಗದ ಹಿನ್ನೆಲೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿಲಾಗಿದೆ. ಆದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಂಗಳೂರಿನ ಐದು ಕಡೆ ಕರ್ಫ್ಯೂ ಜಾರಿಗೊಳಿಸಲಾಗಿದೆ. 

ಬಂದರು, ಪಾಂಡೇಶ್ವರ, ಬರ್ಕೆ, ಹಂಪನಕಟ್ಟೆ ಹಾಗೂ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಮಂಗಳೂರಿನ ಸ್ಟೇಟ್  ಬ್ಯಾಂಕ್ ಬಳಿ ಲಾಠಿ ಪ್ರಹಾರ ನಡೆದ ಪರಿಣಾಮ ನಗರದಾದ್ಯಂತ ವಾಹನ ದಟ್ಟಣೆ ಉಂಟಾಗಿತ್ತು.  ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ರಾವ್ ಆ್ಯಂಡ್ ರಾವ್ ವೃತ್ತದಲ್ಲಿ ಪೊಲೀಸರು  ಕೆಲ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸಿದರು. ಜಿಲ್ಲೆಯಲ್ಲಿ  ನಿಷೇದಾಜ್ಞೆ ನಡುವೆಯೂ  ಕೆಲ ಕಿಡಿಗೇಡಿಗಳು ನಗರ ಮಧ್ಯಭಾಗದ ಬಲ್ಮಠದ ಶಾಂತಿ ನಿಲಯ ಆವರಣದ ಆಲದ ಮರಕ್ಕೆ ಬೆಂಕಿ  ಹಚ್ಚಿದ್ದರು. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com