ಮಂಗಳೂರು ಗೋಲಿಬಾರ್‌: ಮೃತರ ಕುಟುಂಬಗಳಿಗೆ ಪರಿಹಾರ ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

ಮಂಗಳೂರು ಗೋಲಿಬಾರ್‌ ಪ್ರಕರಣದಲ್ಲಿ ಮೃತಪಟ್ಟಿರುವ ಇಬ್ಬರು ಒಂದು ವೇಳೆ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾದರೆ ಅವರ ಕುಟುಂಬಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ

ಮಂಗಳೂರು: ಮಂಗಳೂರು ಗೋಲಿಬಾರ್‌ ಪ್ರಕರಣದಲ್ಲಿ ಮೃತಪಟ್ಟಿರುವ ಇಬ್ಬರು ಒಂದು ವೇಳೆ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾದರೆ ಅವರ ಕುಟುಂಬಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಲಿಬಾರ್‌ಗೆ ಬಲಿಯಾದವರು ಅಪರಾಧಿಗಳಾಗಿದ್ದರೆ ಪರಿಹಾರ ನೀಡುವುದು ಅಕ್ಷಮ್ಯ ಅಪರಾಧವಾಗುತ್ತದೆ. ಬಲಿಯಾದವರು ಹಿಂಸಾಚಾರದಲ್ಲಿ ಭಾಗಿಯಾಗಿರುವ ಶಂಕೆಯಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದ್ದರಿಂದ ಸದ್ಯ ಪರಿಹಾರ ಕೊಡಲಾಗದು ಎಂದು ಅವರು ತಿಳಿಸಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಗೋಲಿಬಾರ್‌ಗೆ ಬಲಿಯಾದವರಿಗೆ ಸರಕಾರ ಪರಿಹಾರ ಘೋಷಿಸಿದೆ. ಆದರೆ ಇನ್ನೂ ಪರಿಹಾರ ನೀಡಿಲ್ಲ. ಮೃತಪಟ್ಟವರು ಅಪರಾಧಿಗಳಾಗಿದ್ದರೆ ಪರಿಹಾರ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಡಿ.19ರಂದು ಮಂಗಳೂರಿನಲ್ಲಿ ನಡೆದ ಗೋಲಿಬಾರ್ ನಲ್ಲಿ ಅಬ್ದುಲ್ ಜಲೀಲ್ ಮತ್ತು ನೌಶೀನ್ ಎಂಬವರು ಬಲಿಯಾಗಿದ್ದರು. ಡಿ.22ರಂದು ಮಂಗಳೂರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತ್ರಸ್ತ ಕುಟುಂಭವನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ್ದರು. ಈ ವೇಳೆ ಸಂತ್ರಸ್ತ ಕುಟುಂಬ ಕೂಡ ತಮಗೆ ಪರಿಹಾರ ಬೇಡ, ನ್ಯಾಯ ದೊರಕಿಸಿಕೊಡಿ ಎಂದು ಮನವಿ ಮಾಡಿತ್ತು. ಆದರೂ ಯಡಿಯೂರಪ್ಪ ಬೆಂಗಳೂರಿಗೆ ಬಂದ ಬಳಿಕ ಸಂತ್ರಸ್ತ ಎರಡು ಕುಟುಂಬಕ್ಕೆ ತಲಾ 10 ಲಕ್ಷ ರೂ.ಪರಿಹಾರ ನೀಡುವುದಾಗಿ ಘೋಷಿಸಿದ್ದರು.

ಆದರೆ ಇಂದು ಮಂಗಳೂರಿನಲ್ಲಿ ಪರಿಹಾರ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದು, ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ತನಿಖೆಯ ಬಳಿಕ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸರ್ಕಾರ ಈ ನಿರ್ಧಾರಕ್ಕೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪರಿಹಾರ ಘೋಷಿಸುವ ಮೊದಲು ಸರ್ಕಾರದ ಐಬಿ ಇಲಾಖೆ ವರದಿ ನೀಡಿಲ್ಲವೇ ? ಎಂದು ವಿ.ಎಸ್.ಉಗ್ರಪ್ಪ, ರಿಜ್ವಾನ್ ಅರ್ಷದ್ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಪರಿಹಾರ ಘೋಷಿಸಿದ ಬಳಿಕ ಬಿಜೆಪಿ ನಾಯಕರಿಂದ ಒತ್ತಡ ಬಂದಿದೆ. ಪರಿಹಾರ ನೀಡಿದರೆ ಗಲಭೆಯಲ್ಲಿ ಪೊಲೀಸರು ತಪ್ಪಿತಸ್ಥರು ಎಂಬುದು ಸಾಬೀತಾದಂತಾಗುತ್ತದೆ. ಆದ್ದರಿಂದ ಪರಿಹಾರ ನೀಡಬೇಡಿ ಎಂದು ಬಿಜೆಪಿ ನಾಯಕರು ಮುಖ್ಯಮಂತ್ರಿ ಮೇಲೆ ಒತ್ತಡ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತಮ್ಮ ನಿಲುವಿನಿಂದ ಹಿಂದೆ ಸರಿದಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ವಿ.ಎಸ್.ಉಗ್ರಪ್ಪ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com