ವಿಶ್ವೇಶ್ವರ ಭಟ್ಟರ ವಿರುದ್ಧ ಪ್ರಕರಣ ಹಿಂಪಡೆಯಲು ಎಸ್ ಎಂ ಕೃಷ್ಣ ಸಲಹೆ

ಪತ್ರಕರ್ತ ಮತ್ತು ವಿಶ್ವವಾಣಿ ದಿನಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ಟರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಸಲಹೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಪತ್ರಕರ್ತ ಮತ್ತು ವಿಶ್ವವಾಣಿ ದಿನಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ಟರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಸಲಹೆ ನೀಡಿದ್ದಾರೆ.
ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ನಿಖಿಲ್ ಕುಮಾರಸ್ವಾಮಿ ಕುರಿತಂತೆ ವಿಶ್ವವಾಣಿ ಪತ್ರಿಕೆ ಆಕ್ಷೇಪಾರ್ಹ ವರದಿ ಪ್ರಕಟಿಸಿದೆ ಎಂದು ಆರೋಪಿಸಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್. ಪಿ. ಪ್ರದೀಪ್ ಕುಮಾರ್ ದೂರು ಸಲ್ಲಿಸಿದ್ದರು. ಈ ವಿಚಾರ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು ಜೆಡಿಎಸ್ ಮತ್ತು ದೇವೇಗೌಡರ ಕುಟುಂಬದ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇದಕ್ಕೆ ಇಂಬು ನೀಡುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೂಡ ಜೆಡಿಎಸ್ ನಡೆಯನ್ನು ಟೀಕಿಸಿದ್ದು, ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್ ಅವರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿರುವುದು ಸೂಕ್ತ ಕ್ರಮವಲ್ಲ ಎಂದು ಹೇಳಿದೆ.
ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಹಾಗೂ ಮಾಜಿ ಸಿಎಂ ಎಸ್ ಎಂ ಕೃಷ್ಣ ಕೂಡ ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ  ಅವರು 'ಪೊಲೀಸರಿಗೆ ದೂರು ದಾಖಲಿಸುವ ಅಗತ್ಯವಿರಲಿಲ್ಲ. ಬದಲಾಗಿ ಸ್ಪಷ್ಟನೆ ನೀಡಬಹುದಿತ್ತು. ಇದು ಲೋಕಸಭಾ ಚುನಾವಣೆಯಲ್ಲಿ ಸೋತಿರುವ ಅಸಹನೆಯನ್ನು ತೋರಿಸುತ್ತದೆ ಎಂದಿದ್ದಾರೆ. 
ಪತ್ರಿಕೆಯ ಸಂಪಾದಕರ ವಿರುದ್ಧ ಹೇರಲಾಗಿರುವ ಪ್ರಕರಣ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದ್ದು, ಪತ್ರಿಕಾ ಸ್ವಾತಂತ್ರವನ್ನು ಕಗ್ಗೊಲೆ ಮಾಡಿದಂತೆ ಎಂದು ಕೃಷ್ಣ ಅಭಿಪ್ರಾಯಪಟ್ಟಿದ್ದು, ಪ್ರಕರಣವನ್ನು ಕೂಡಲೆ ಹಿಂಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವ ಅವರು, ವಿಶ್ವೇಶ್ವರ ಭಟ್ಟರ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ತಕ್ಷಣ ಹಿಂಪಡೆಯಬೇಕೆಂದು ಕೃಷ್ಣಾ ಪತ್ರದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com