ಉಪಚುನಾವಣೆ ಸಮರ: 15 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಎಂ ಯಡಿಯೂರಪ್ಪ, ಕಟೀಲ್ ಪ್ರಚಾರ

ಪ್ರತಿಷ್ಠೆಯ ಕಣವಾಗಿರುವ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ 15 ಕ್ಷೇತ್ರಗಳಲ್ಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನ.23 ರಿಂದ ಪ್ರಚಾರ ಆರಂಭಿಸಲಿದ್ದಾರೆ. 
ಕಟೀಲ್ ಮತ್ತು ಯಡಿಯೂರಪ್ಪ
ಕಟೀಲ್ ಮತ್ತು ಯಡಿಯೂರಪ್ಪ

ಬೆಂಗಳೂರು: ಪ್ರತಿಷ್ಠೆಯ ಕಣವಾಗಿರುವ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ 15 ಕ್ಷೇತ್ರಗಳಲ್ಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನ.23 ರಿಂದ ಪ್ರಚಾರ ಆರಂಭಿಸಲಿದ್ದಾರೆ. 

ಉಪಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಚುನಾವಣಾ ಸಿದ್ಧತೆ ಕುರಿತು ಚರ್ಚೆ ನಡೆಸಲಾಗಿದೆ. 

15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಬಿಜೆಪಿಗೆ ಅಳಿವು-ಉಳಿವಿನ ಪ್ರಶ್ನೆಯಾಗಿದ್ದು, ಹೀಗಾಗಿ 15 ವಿಧಾನಸಭಾ ಕ್ಷೇತ್ರಗಳಲ್ಲೂ ಮುಖ್ಯಮಂತ್ರಿ ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಸಚಿವ ಬಿ.ಶ್ರೀರಾಮುಲು ಅವರು ಪ್ರಚಾರ ಕಾರ್ಯ ನಡೆಸಲಿದ್ದಾರೆ. 

ಪ್ರಚಾರ ಕಾರ್ಯಗಳ ಕುರಿತ ವೇಳಾಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಲಿದೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ. 

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕುರಿತು ಇದೇ ವೇಳೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಬಂಡಾಯ ಶಾಸಕ ಶರತ್ ಬಚ್ಚೇಗೌಡ ಅವರು ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ಹಿಂಪಡೆಯುವಂತೆ ಈ ಹಿಂದೆ ಶರತ್ ಬಚ್ಚೇಗೌಡ ಅವರಿಗೆ ಸೂಚಿಸಲಾಗಿತ್ತು. ಆದರೆ, ಅವರು ನಾಮಪತ್ರ ಹಿಂಪಡೆಯಲಿಲ್ಲ. ಹೀಗಾಗಿ ಪಕ್ಷ ಅವರ ವಿರುದ್ಧ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ. 

ಈ ನಡುವೆ ಎಂಎಲ್'ಸಿ ಅಶ್ವತ್ಥ್ ನಾರಾಯಣ ಗೌಡ ಅವರನ್ನು ಹೊಸಕೋಟೆ ಉಸ್ತುವಾರಿ ನೀಡಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಈ ಹಿಂದೆ ಅಶ್ವತ್ಥ್ ನಾರಾಯಣ ಗೌಡ ಅವರಿಗೆ ಯಶವಂತಪುರದ ಜವಾಬ್ದಾರಿಯನ್ನು ನೀಡಲಾಗಿತ್ತು. ಹೊಸಕೋಟೆಯಲ್ಲಿ ಒಕ್ಕಲಿಗರ ಸಂಖ್ಯೆ ಹೆಚ್ಚಾಗಿದ್ದು, ಒಕ್ಕಲಿಗರ ಸೆಳೆಯಲು ಇದೀಗ ಅಶ್ವತ್ಥ್ ನಾರಾಯಣ ಅವರಿಗೆ ಹೊಸಕೋಟೆ ಉಸ್ತುವಾರಿ ನೀಡಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com