ಕಾಂಗ್ರೆಸ್ ಮುಖಂಡರ ಮೇಲೆ ಮುಂದುವರಿದ ಐಟಿ ದಾಳಿ; ಪರಮೇಶ್ವರ್, ಜಾಲಪ್ಪ ನಿವಾಸದಲ್ಲಿ ಶೋಧ

ಕಾಂಗ್ರೆಸ್ ಮುಖಂಡರ ಒಡೆತನದ  ಮನೆ ಮತ್ತು ಸಂಸ್ಥೆಗಳ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪರಮೇಶ್ವರ್
ಪರಮೇಶ್ವರ್

ಬೆಂಗಳೂರು: ಕಾಂಗ್ರೆಸ್ ಮುಖಂಡರ ಒಡೆತನದ  ಮನೆ ಮತ್ತು ಸಂಸ್ಥೆಗಳ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸ ಮತ್ತು ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆಸಲಾಗಿದೆ.

ಸದಾಶಿವ ನಗರದಲ್ಲಿರುವ ಪರಮೇಶ್ವರ್ ನಿವಾಸ, ತುಮಕೂರಿನಲ್ಲಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು. ಡಿಗ್ರಿ ಕಾಲೇಜು  ಹಾಗೂ ನೆಲಮಂಗಲದಲ್ಲಿರುವ ಕಾಲೇಜು ಸೇರಿದಂತೆ ಹಲವು ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಇನ್ನೂ ಕಾಂಗ್ರೆಸ್ ಮುಖಂಡ ಆರ್ ಎಲ್ ಜಾಲಪ್ಪ ಪುತ್ರನ ಮನೆ ಹಾಗೂ ಅವರ ಒಡೆತನದ ಆಸ್ಪತ್ರೆ ಮೇಲೂ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ ಬೆಂಗಳೂರಿನ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಒಟ್ಟು ಮೂರು ಕಾರುಗಳಲ್ಲಿ ಬಂದ ಐದು ಆಧಿಕಾರಿಗಳ ತಂಡ ಕಾಲೇಜಿನ ಸಿಬ್ಬಂದಿಯನ್ನು ಹೊರಗೆ ಕಳಿಸಿ ಕಾಲೇಜಿನ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ,.

ದಾಳಿ ಕುರಿತು ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ,  ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿರುವ ಬಗ್ಗೆ ತಮಗೆ ಮಾಹಿತಿ ಬಂದಿದೆ. ಇದಕ್ಕೆ ತಮ್ಮ ಆಕ್ಷೇಪವಿಲ್ಲ. ಕಾನೂನು ನಿಯಮಬಾಹಿರವಾಗಿ ಏನಾದರೂ ನಡೆದಿದ್ದರೆ ಅಧಿಕಾರಿಗಳು ಕ್ರಮ ಜರುಗಿಸಲಿ ಎಂದರು‌.


ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಕಾಂಗ್ರೆಸ್ ನಾಯಕರನ್ನು ಬಿಜೆಪಿ ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ರಾಜಕೀಯ ದುರುದ್ದೇಶದಿಂದ ಐಟಿ ದಾಳಿ ನಡೆಸಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲೂ ಇದೇ ರೀತಿ ಕಾಂಗ್ರೆಸ್ ನಾಯಕರನ್ನು ಗುರಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಐಟಿ ಇಡಿ ದುರುಪಯೋಗಪಡಿಸಿಕೊಳ್ಳುತ್ತಿದೆ. ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com