ವಿಶ್ವ ವಿಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ನಿಧನ: ಸಿಎಂ ಸಂತಾಪ

ವಿಶ್ವವಿಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ (70) ವಯೋಸಹಜ ಅನಾರೋಗ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ.
ಕದ್ರಿ ಗೋಪಾಲನಾಥ್
ಕದ್ರಿ ಗೋಪಾಲನಾಥ್

ಮಂಗಳೂರು: ವಿಶ್ವವಿಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ (70) ವಯೋಸಹಜ ಅನಾರೋಗ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ.

1949ರ ಡಿಸೆಂಬರ್ 11ರಂದು ಜನಿಸಿದ ಗೋಪಾಲನಾಥ್ ಅವರು ಸ್ಯಾಕ್ಸೋಫೋನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ಅವರು ವಿಶ್ವಪ್ರಸಿದ್ಧಿ ಪಡೆದಿದ್ದರು

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೋಪಾಲನಾಥ್ ಅವರು ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿ ಮತ್ತು ಪುತ್ರ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮಂಗಳೂರು ಪದವಿನಂಗಡಿ ಮನೆಯಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಬಾಲ್ಯದಿಂದಲೇ ತಂದೆಯವರಿಂದ ಪಾಠವನ್ನು ಕಲಿತ ಕದ್ರಿ ಗೋಪಾಲನಾಥರು ನಂತರ ಕಲಾನಿಕೇತನದ ಎನ್. ಗೋಪಾಲಕೃಷ್ಣ ಅಯ್ಯರ್ ಅವರಿಂದ ಸ್ಯಾಕ್ಸೋಫೋನ್ ವಾದ್ಯದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ನುಡಿಸುವುದನ್ನು ಕಲಿತರು.

ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು.  ಆಕಾಶವಾಣಿ ‘ಎ’ ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು. ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.

ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.

ಸ್ಯಾಕ್ಸಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿದೇಶಿ ವಾದ್ಯವೊಂದನ್ನು ಶಾಸ್ತ್ರೀಯ ಸಂಗೀತಕ್ಕೆ ಹೊಂದಿಸಿಕೊಂಡು ಮಾಧುರ್ಯದ ಹೊನಲು ಹರಿಸಿದ ಶ್ರೇಷ್ಠ ಸಂಗೀತಗಾರ ಅವರು, ಅವರ ನಿಧನದಿಂದ ಸಂಗೀತ ಲೋಕದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬಕ್ಕೆ , ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com