ಬಿಪಿಎಲ್ ಕಾರ್ಡ್ ದಾರರಿಗೆ ಬಂಪರ್: ವೈದ್ಯಕೀಯ ಶಿಕ್ಷಣ ಇಲಾಖೆ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಶುಲ್ಕ ರದ್ದು

ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳ ರೋಗಿಗಳಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಶುಲ್ಕ ರದ್ದುಪಡಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು:  ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳ ರೋಗಿಗಳಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಶುಲ್ಕ ರದ್ದುಪಡಿಸಲಾಗಿದೆ.

ಈ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ಆಸ್ಪತ್ರೆಗಳಲ್ಲಿ ಶೇಕಡ 50 ರಷ್ಟು ಲ್ಯಾಬ್ ಶುಲ್ಕ ವಿಧಿಸುತ್ತಿದ್ದು, ಇದನ್ನು ರದ್ದುಮಾಡಲಾಗಿದೆ. ಬಡ ರೋಗಿಗಳ ಅನುಕೂಲಕ್ಕಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ತನ್ನ ವ್ಯಾಪ್ತಿಯಲ್ಲಿ ಬರುವ ಕಾಲೇಜು ಆಸ್ಪತ್ರೆಗಳಲ್ಲಿ ಪಡೆಯುತ್ತಿದ್ದ ಪ್ರಯೋಗಾಲಯ ಶುಲ್ಕ ರದ್ದು ಮಾಡಿದ್ದು, ತಕ್ಷಣದಿಂದಲೇ ಆದೇಶ ಅನ್ವಯವಾಗಲಿದೆ. 

ವೈದ್ಯಕೀಯ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಈ ನಿರ್ಣಯಕೈಗೊಳ್ಳಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ಹೇಮಲತಾ, ನಿರ್ದೇಶಕ ಗಿರೀಶ್ ಅವರನ್ನು ಒಳಗೊಂಡ ಸಭೆಯಲ್ಲಿ ಚರ್ಚಿಸಿ ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರ್ಕಾರ ತೀರ್ಮಾನ ಕೈಗೊಂಡಿದೆ.

ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಏಳು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, 10 ಸ್ವಾಯತ್ತ ಕಾಲೇಜು ಸೇರಿದಂತೆ ಒಟ್ಟಾರೆ ೧೭ ವೈದ್ಯಕೀಯ ಕಾಲೇಜು ಆಸ್ಪತ್ರೆ ಗಳಿವೆ. ಸಾಮಾನ್ಯವಾಗಿ ಬಿಪಿಎಲ್ ಕಾರ್ಡುದಾರರು ಆರ್ಥಿಕವಾಗಿ ಹಿಂದುಳಿದವರಾಗಿರುವುದರಿಂದ ಶುಲ್ಕ ಪಾವತಿಸುವುದು ಕಷ್ಟವಾಗಲಿದೆ. ಒಂದು ವೇಳೆ ಶುಲ್ಕ ಪಾವತಿಸಲು ಸಾಧ್ಯವಾಗದಿದ್ದರೆ ರೋಗಿಗಳಿಗೆ ಚಿಕಿತ್ಸೆ ದೊರೆಯುವುದಿಲ್ಲ. ಖಾಸಗಿ ಪ್ರಯೋಗಾಲಯದ ದುಬಾರಿ ವೆಚ್ಚಗಳನ್ನು ಭರಿಸಿ ವರದಿಗಳನ್ನು ಪಡೆಯಲು ಕಷ್ಟವಾಗುವುದನ್ನು ತಪ್ಪಿಸಿ ಬಡವರು ಆರೋಗ್ಯ ಸೇವೆಯಿಂದ ವಂಚಿತಗೊಳ್ಳಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com