ರಾಜ್ಯದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ: ಗೃಹ ಸಚಿವ ಬೊಮ್ಮಾಯಿ

ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ರಾಜ್ಯದ ವಿವಿಧ ಕಡೆ ನಡೆದ ಪ್ರತಿಭಟನೆ ಹಾಗೂ ಕಲ್ಲು ತೂರಾಟ ಮತ್ತಿತರ ಘಟನೆಗಳು ನಡೆದಿದ್ದು, ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು‌ ಗೃಹ ಸಚಿವ ಬಸವರಾಜ ಬೊಮ್ಮಾಯಿ...
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ರಾಜ್ಯದ ವಿವಿಧ ಕಡೆ ನಡೆದ ಪ್ರತಿಭಟನೆ ಹಾಗೂ ಕಲ್ಲು ತೂರಾಟ ಮತ್ತಿತರ ಘಟನೆಗಳು ನಡೆದಿದ್ದು, ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು‌ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯವ್ಯಾಪಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕಾನೂನು ಸುವ್ಯವಸ್ಥೆ ಬಗ್ಗೆ ಹಾಗೂ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನದ ಬಳಿಕ ನಿನ್ನೆ ರಾತ್ರಿಯಿಂದ ಕೆಲವೆಡೆ ಪ್ರತಿಭಟನೆ ಹಾಗೂ ಬಸ್ ಗಳಿಗೆ ಕಲ್ಲು ತೂರಾಟದಂತಹ ಪ್ರಕರಣಗಳು ನಡೆದಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಸ್ತುತ ಪರಿಸ್ಥಿತಿ ಹತೋಟಿಯಲ್ಲಿದೆ, ಇಂದು ಸಹ ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು, ಹಾಸನ, ಮೈಸೂರು ಸೇರಿದಂತೆ ಅಲ್ಲಲ್ಲಿ ಬಸ್ ಗಳಿಗೆ ಕಲ್ಲು ತೂರಾಟ, ಟೈ​ರ್ ಗೆ ಬೆಂಕಿ ಹಚ್ಚಿರುವ ಘಟನೆಗಳು, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿರುವ ಮಾಹಿತಿಗಳು ಲಭ್ಯವಾಗಿದ್ದು, ಈ ಸಂಬಂಧ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಭದ್ರತೆ ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಪ್ರತಿಭಟನಾ ನಿರತರನ್ನು ಬಂಧಿಸುವಂತೆ ಈ ಕ್ಷಣದವರೆಗೂ ಸರ್ಕಾರವಾಗಲೀ ಅಥವಾ ತಾವಾಗಲೀ ಆದೇಶ ನೀಡಿಲ್ಲ. ಆದರೆ ಸಮಯ ಸಂದರ್ಭ ಹಾಗೂ ಪರಿಸ್ಥಿತಿಯನ್ನು ಗಮನಿಸಿ ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲು ಸಂಬಂಧ ಪಟ್ಟ ಅಧಿಕಾರಿಗಳು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗಳು ಸ್ವಾಯತ್ತ ಸಂಸ್ಥೆಗಳಾಗಿದ್ದು ಅವುಗಳ ಮೇಲೆ ಯಾರೂ ಪ್ರಭಾವ ಬೀರಿಲ್ಲ. ಇದರಲ್ಲಿ ರಾಜಕೀಯ ದ್ವೇಷದ ಪ್ರಶ್ನೆಯೇ ಉದ್ಬವಿಸುವುದಿಲ್ಲ. ಇಡಿ, ಸಿಬಿಐ ಸಂಸ್ಥೆಗಳು ಸಾಂವಿಧಾನಿಕ ಸಂಸ್ಥೆಗಳಾಗಿದ್ದು, ಅವು ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ಬಂಧನವನ್ನು ಸಮರ್ಥಿಸಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com