ನೆರೆ, ಅತಿವೃಷ್ಟಿ ಸಂತ್ರಸ್ಥ ರೈತರ ಸಾಲಮನ್ನಾ ಬಗ್ಗೆ ಸರ್ಕಾರ ಪರಿಶೀಲನೆ: ಸಚಿವ ಜಗದೀಶ್ ಶೆಟ್ಟರ್

ನೆರೆ ಹಾಗು ಅತಿವೃಷ್ಠಿಯಿಂದ ಬೆಳೆಹಾನಿಯಾಗಿರುವ ರೈತರ ಸಾಲ ವಸೂಲಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದ್ದು, ರೈತರ ಬೆಳೆ ಸಾಲಮನ್ನಾ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ರೈತರಿಗೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದರು.

Published: 22nd September 2019 10:36 AM  |   Last Updated: 22nd September 2019 10:36 AM   |  A+A-


Jagadish Shettar

ಸಂಗ್ರಹ ಚಿತ್ರ

Posted By : Srinivasamurthy VN
Source : UNI

ಬೆಳಗಾವಿ: ನೆರೆ ಹಾಗು ಅತಿವೃಷ್ಠಿಯಿಂದ ಬೆಳೆಹಾನಿಯಾಗಿರುವ ರೈತರ ಸಾಲ ವಸೂಲಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದ್ದು, ರೈತರ ಬೆಳೆ ಸಾಲಮನ್ನಾ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ರೈತರಿಗೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳು ಹಾಗೂ ಮುಖಂಡರುಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು,ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಾಣ ಆರಂಭಿಸಲು ತಕ್ಷಣವೇ ಒಂದು ಲಕ್ಷ ರೂಪಾಯಿ ಬಿಡುಗಡೆಗೆ ಸಚಿವ ಸಂಪುಟ ಸಭೆ ನಿರ್ಧರಿಸಿದ್ದು, ಒಂದು ಸಾವಿರ ಕೋಟಿ ರೂಪಾಯಿ ಬಿಡುಗಡೆಗೆ ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಗದೀಶ್ ಶೆಟ್ಟರ್ ತಿಳಿಸಿದರು.

ಬೆಳೆಹಾನಿ ಸಮೀಕ್ಷೆ ಪೂರ್ಣಗೊಂಡ ತಕ್ಷಣವೇ ರಾಷ್ಟ್ರೀಯ ವಿಪತ್ತು ಮಾರ್ಗಸೂಚಿಯನ್ವಯ ಜತೆಗೆ ರಾಜ್ಯ ಸರ್ಕಾರ ಕೂಡ ವಿಶೇಷ ಪರಿಹಾರ ನೀಡಲಿದೆ.ಪ್ರವಾಹದಿಂದ ಉಂಟಾಗಿರುವ ಹಾನಿಯ ಕುರಿತು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದ್ದು,ಶೀಘ್ರವೇ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆಯನ್ನು ಮಾಡಲಿದೆ ಎಂಬ ಆಶಯ ವ್ಯಕ್ತಪಡಿಸಿದರು. ನೆರೆ ಸಂತ್ರಸ್ಥ ಪ್ರದೇಶಗಳಲ್ಲಿ ಆಸ್ತಿ ಹಾಗೂ ಬೆಳೆ ಹಾನಿಯನ್ನು ಸರಿಪಡಿಸಿ ಸಹಜ ಸ್ಥಿತಿಗೆ ತರುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ.ಹಾನಿಯ ಗಂಭೀರತೆಯನ್ನು ಅರಿತು ತಕ್ಷಣವೇ ಪ್ರತಿ ಕುಟುಂಬಕ್ಕೆ ಹತ್ತು ಸಾವಿರ ಪರಿಹಾರ ನೀಡಲಾಗಿದೆ.ಸಮೀಕ್ಷೆ ಮತ್ತು ತಾಂತ್ರಿಕ ಲೋಪದೋಷಗಳಿಂದ ಪರಿಹಾರದಿಂದ ವಂಚಿತಗೊಂಡ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು.ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿ ಮಾರ್ಗಸೂಚಿಯ ಪ್ರಕಾರ ಕಡಿಮೆ ಪರಿಹಾರ ಆಗುವುದರಿಂದ ಸರ್ಕಾರ ಹೆಚ್ಚಿನ ಪರಿಹಾರವನ್ನು ಮೊಟ್ಟಮೊದಲ ಬಾರಿಗೆ ಘೋಷಿಸಿದೆಎಂದರು.

ಬೆಳಗಾವಿ ಜಿಲ್ಲೆಗೆ ತಕ್ಷಣ ಎರಡು ನೂರು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ. ರಾಜ್ಯದ ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಸುಧಾರಣೆಗೆ ಐದು ನೂರು ಕೋಟಿ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಪರಿಹಾರ ಕಾರ್ಯ ಕೈಗೊಳ್ಳಲು ಯಾವುದೇ ರೀತಿಯ ಹಣಕಾಸಿನ ತೊಂದರೆಯಾಗದಂತೆ ಸರ್ಕಾರ ಕ್ರಮ ವಹಿಸಿದೆ ಎಂದು ಶೆಟ್ಟರ್ ವಿವರಿಸಿದರು. ಪರಿಹಾರ ಕೆಲಸಕಾರ್ಯಗಳು ನಡೆಯುತ್ತಿರುವುದರಿಂದ ಅನಿವಾರ್ಯ ಕಾರಣಗಳಿಂದಾಗಿ ಈ ಬಾರಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುತ್ತಿಲ್ಲ.ರೈತರು ಹಾಗೂ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ತುರ್ತಾಗಿ ಭೇಟಿ ನೀಡಿದ್ದೇನೆ.ಮುಂಬರುವ ದಿನಗಳಲ್ಲಿ ಮತ್ತೊಮ್ಮೆ ಸಭೆ ನಡೆಸಿ ವಿಸ್ತೃತ ಚರ್ಚೆ ನಡೆಸುವುದಾಗಿ ತಿಳಿಸಿದರು. ಪ್ರವಾಹ ಸಂದರ್ಭದಲ್ಲಿ ತುರ್ತು ರಕ್ಷಣಾ ಕಾರ್ಯ ಕೈಗೊಂಡಿರುವ ಜಿಲ್ಲಾಡಳಿತದ ಕಾರ್ಯವನ್ನು ಸಚಿವ ಜಗದೀಶ್ ಶೆಟ್ಟರ್ ಇದೇ ಸಂದರ್ಭದಲ್ಲಿ ಶ್ಲಾಘಿಸಿದರು.

ಸಭೆಯಲ್ಲಿ ಮಾತನಾಡಿದ ಸವದತ್ತಿ ಶಾಸಕ ಆನಂದ ಮಾಮನಿ, ಆದಷ್ಟು ಬೇಗನೇ ಬೆಳೆಹಾನಿ ಸಮೀಕ್ಷೆ ನಡೆಸಬೇಕು.ಅದೇ ರೀತಿ ಸಮೀಕ್ಷೆ ಬಳಿಕ ಮತ್ತಷ್ಟು ಮನೆಗಳು ಕುಸಿದಿದ್ದು, ಇದರ ಬಗ್ಗೆ ಮರು ಸಮೀಕ್ಷೆ ಕೈಗೊಳ್ಳಬೇಕು ಎಂದು ತಿಳಿಸಿದರು. ಹಿಂಗಾರು ಹಂಗಾಮು ಆರಂಭಗೊಳ್ಳುತ್ತಿರುವುದರಿಂದ ಕೂಡಲೇ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಹಾನಿಯ ಸಮೀಕ್ಷೆ ತುರ್ತಾಗಿ ನಡೆಸಬೇಕು.ನೇಕಾರರು ತೀವ್ರ ಸಂಕಷ್ಟದಲ್ಲಿದ್ದು, ಸೂಕ್ತ ಪರಿಹಾರ ವಿತರಣೆ ನೀಡಬೇಕು ಎಂದು ಅವರು ಸಚಿವರಿಗೆ ಮನವಿ ಮಾಡಿದರು. ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ಮಾತನಾಡಿ, ಶೇ.50 ರಷ್ಟು ಮನೆ ಹಾನಿಯಾಗಿರುವ ಪ್ರಕರಣಗಳಲ್ಲಿ ಸಂಪೂರ್ಣ ಹಾನಿ ಎಂದು ಪರಿಗಣಿಸಬೇಕು ಮತ್ತು ಪರಿಹಾರ ಕೇಂದ್ರದ ಬದಲು ಸಂಬಂಧಿಕರ ಮನೆಗಳಲ್ಲಿ ರಕ್ಷಣೆ ಪಡೆದಿದ್ದ ಕುಟುಂಬಗಳಿಗೂ ಹತ್ತು ಸಾವಿರ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು. ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ರಾಯಭಾಗ ಶಾಸಕ ದುರ್ಯೋಧನ ಐಹೊಳೆ, ಮಾತನಾಡಿ, ಸಂತ್ರಸ್ತರ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.

ಪ್ರವಾಹದಿಂದಾಗಿ ಜಿಲ್ಲೆಯಲ್ಲಿ ಒಟ್ಟಾರೆ ಹತ್ತು ಸಾವಿರ ಕೋಟಿ ಹಾನಿಯಾಗಿದ್ದು,ಇದುವರೆಗೆ 167 ಕೋಟಿ ರೂ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಪ್ರವಾಹದಿಂದ ಒಟ್ಟಾರೆ 6.66 ಲಕ್ಷ ಹೆಕ್ಟೇರ್ ಮುಂಗಾರು ಬಿತ್ತನೆಯಾಗಿದ್ದು, ಇದರಲ್ಲಿ ಒಟ್ಟು 2.77 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಪ್ರಮುಖವಾಗಿ ಕಬ್ಬು ಬೆಳೆ ಹಾನಿಯಾಗಿರುತ್ತದೆ ಎಂದು ಸಭೆಯಲ್ಲಿ ವಿವರಿಸಿದರು. ಆಗಸ್ಟ್ ಮೊದಲ ವಾರದಲ್ಲಿ ಶೇ.490 ರಷ್ಟು ಅಧಿಕ ಮಳೆಯಾಗಿದ್ದು, ನೆರೆ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಒಟ್ಟಾರೆ 5.20 ಲಕ್ಷ ಕ್ಯೂಸೆಕ್ ನೀರು ಹರಿದ ಪರಿಣಾಮ 377 ಗ್ರಾಮದಲ್ಲಿ ಪ್ರವಾಹ ಉಂಟಾಗಿದೆ. 4.15 ಲಕ್ಷ ಜನರನ್ನು ಸುರಕ್ಷಿತ ಸ್ಥಳಾಂತರಗೊಳಿಸಿ 493 ಪರಿಹಾರ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ತುರ್ತು ರಕ್ಷಣಾ ಕಾರ್ಯ ಕೈಗೊಳ್ಳಲಾಯಿತು. ಜಿಲ್ಲೆಯಲ್ಲಿ ಒಟ್ಟಾರೆ 28 ಜನರ ಸಾವನ್ನಪ್ಪಿದ್ದು, ಈಗಾಹಲೇ 25 ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗಿದೆ.

1.12 ಲಕ್ಷ ಕುಟುಂಬಗಳಿಗೆ ತಲಾ ಹತ್ತು ಸಾವಿರ ರೂಪಾಯಿಗಳ ಪರಿಹಾರ ವಿತರಿಸಲಾಗಿದೆ. ಇದೀಗ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 69,183 ಮನೆಗಳು ಹಾನಿಗೊಳಗಾಗಿದೆ.ಅವುಗಳ ಸಂಪೂರ್ಣ ವಿವರಗಳನ್ನು ರಾಜೀವ ಗಾಂಧಿ ವಸತಿ ನಿಗಮದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಮಳೆಹಾನಿಯ ಬಗ್ಗೆ ಕೆಲವು ಹೊಸದಾಗಿ ಮಾಹಿತಿ ಅಥವಾ ದೂರು ಆಧರಿಸಿ ಪಟ್ಟಿಯನ್ನು ಪರಿಷ್ಕರಿಸಲಾಗುವುದು. ನಿಗಮದ ವೆಬ್ ಸೈಟ್ ನಲ್ಲಿ ಅಳವಡಿಸಿದ ಮಾಹಿತಿಯ ಪ್ರಕಾರ ಮನೆಹಾನಿಗೆ ಸಂಬಂಧಿಸಿದ ಪರಿಹಾರ ವಿತರಣೆ ಕಾರ್ಯ ಒಂದು ವಾರದೊಳಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸಭೆಗೆ ವಿವರಿಸಿದರು. ರೈತ ಮುಖಂಡರಾದ ಚೂನಪ್ಪ ಪೂಜಾರಿ ಮಾತನಾಡಿ,ತಕ್ಷಣ ರೈತರಿಗೆ ಬೆಳೆ ಪರಿಹಾರ ಹಣ ಬಿಡುಗಡೆಗೊಳಿಸಬೇಕು ಹಾಗೂ ಬೆಳೆಸಾಲ ಸೇರಿದಂತೆ ಎಲ್ಲ ಬಗೆಯ ಸಾಲಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಕಬ್ಬು ಬೆಳೆಹಾನಿ 1.50 ಲಕ್ಷ ಹಾಗೂ ಉಳಿದ ಬೆಳೆಗೆ ಒಂದು ಲಕ್ಷ ಪರಿಹಾರ ನೀಡಬೇಕು. ಅದೇ ರೀತಿ ಜಾನುವಾರುಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು. ಸಂಪೂರ್ಣ ಮುಳುಗಡೆಯಾಗಿರುವ ಗ್ರಾಮಗಳ ಶಾಶ್ವತ ಸ್ಥಳಾಂತರ ಮಾಡಬೇಕು ಎಂದು ಇದೇ ವೇಳೆ ಅವರು ಆಗ್ರಹಿಸಿದರು. ರೈತ ಮುಖಂಡರಾದ ಸಿದ್ದರಾಯ ಮೋದಗಿ ಮಾತನಾಡಿ, ಅವಿಭಕ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ.ಹೊಲದಲ್ಲಿ ಕಟ್ಟಿರುವ ಮನೆಗಳು ಪ್ರವಾಹದಿಂದ ನಾಶವಾಗಿದ್ದು, ಅವುಗಳಿಗೆ ಪರಿಹಾರ ನೀಡುತ್ತಿಲ್ಲ.ಪ್ರವಾಹದಿಂದ ಹಾನಿ ಇಡೀ ಉತ್ತರ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಋಣಮುಕ್ತ ಪರಿಹಾರ ಕಾಯ್ದೆ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಿಸಬೇಕು.ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ,ತಕ್ಷಣವೇ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡರಾದ ಪ್ರಕಾಶ್ ನಾಯಕ ಅವರು ಮಾತನಾಡಿ, ಸಂತ್ರಸ್ತರ ಕಷ್ಟಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಲಿಲ್ಲ.ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪರಿಹಾರ ಕಾರ್ಯಕೈಗೊಳ್ಳಬೇಕು ಮತ್ತು ಪ್ರತಿ ರೈತ ಕುಟುಂಬಕ್ಕೆ ಒಂದು ಹಸು ಅಥವಾ ಎಮ್ಮೆ ನೀಡಿ ಹೈನುಗಾರಿಕೆಗೆ ಅವಕಾಶ ಮಾಡಿಕೊಡಬೇಕು.ಹಾಗೂ ಮನೆ ನಿರ್ಮಾಣಕ್ಕೆ ಕನಿಷ್ಠ ಹದಿನೈದು ಲಕ್ಷ ಪರಿಹಾರ ನೀಡಬೇಕು ಎಂದು ಸಚಿವರನ್ನು ಆಗ್ರಹಿಸಿದರು. ಪ್ರವಾಹದಿಂದ ಹಾನಿಗೊಳಗಾಗಿರುವ ಜಮೀನುಗಳ ಸ್ವಚ್ಛತೆಗಾಗಿ ಆಯಾ ಕುಟುಂಬಗಳಿಗೆ ಮತ್ತು ಕೃಷಿ ಕಾರ್ಮಿಕರಿಗೂ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಒದಗಿಸಬೇಕು, ಸಂಪೂರ್ಣ ಬೆಳೆ ಸಾಲಮನ್ನಾ ಮಾಡಬೇಕು ಎಂದು ರೈತರ ಮುಖಂಡರು ಸರ್ಕಾರಕ್ಕೆ ಸಲಹೆ ನೀಡಿದರು.

Stay up to date on all the latest ರಾಜ್ಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp