ಪ್ರವಾಹ ಪೀಡಿತ ಪ್ರದೇಶಗಳಿಗೆ ಮತ್ತೆ ಸಿಎಂ ಬಿಎಸ್ ವೈ 3 ದಿನ ಭೇಟಿ

ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಮತ್ತೆ ಮೂರು ದಿನ ಭೇಟಿ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದಾವಣಗೆರೆ: ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಮತ್ತೆ ಮೂರು ದಿನ ಭೇಟಿ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ದಾವಣಗೆರೆಯ ಸರ್ಕಾರಿ ಹೈಸ್ಕೂಲ್‌ ಮೈದಾನದಲ್ಲಿ ಭಾನುವಾರ ಬಾಳೆಹೊನ್ನೂರು ರಂಭಾಪುರಿ ಸ್ವಾಮೀಜಿ ಅವರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಪ್ರವಾಹದಿಂದಾಗಿ ನಲುಗಿದ್ದ ಜಿಲ್ಲೆಗಳ ಹಾಲಿ ಸ್ಥಿತಿಗತಿ ವರದಿಯನ್ನು ಅಧಿಕಾರಿಗಳಿಂದ ಪಡೆದಿದ್ದೇನೆ. ಇದಾಗ್ಯೂ ಖುದ್ಧಾಗಿ ನಾನೇ ಜಿಲ್ಲೆಗಳಿಗೆ ಭೇಟಿ ನೀಡಿ ನೇರವಾಗಿ ಜನರಿಂದಲೇ ಮಾಹಿತಿ ಪಡೆಯುತ್ತೇನೆ. ಅಕ್ಟೋಬರ್ 3, 4 ಮತ್ತು 5 ರಂದು ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಅಲ್ಲದೆ ಭೇಟಿ ವೇಳೆ ಪ್ರವಾಹ ಸಂತ್ರಸ್ಥರಿಗೆ ಸರ್ಕಾರ ನೀಡಿದ್ದ ಪರಿಹಾರ ಸಮರ್ಪಕವಾಗಿ ಹಂಚಿಕೆಯಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.

ಇದೇ ವೇಳೆ ಪ್ರವಾಹ ಪೀಡಿತ ಕರ್ನಾಟಕಕ್ಕೆ ಕೇಂದ್ರದ ಅನುದಾನದ ಕುರಿತು ಮಾತನಾಡಿದ ಸಿಎಂ, ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಪರಿಹಾರ ನೀಡುವ ಕುರಿತು ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರ ಕೂಡ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಯಾವುದೇ ಕ್ಷಣದಲ್ಲಿಯೂ ಕೇಂದ್ರ ಹೆಚ್ಚುವರಿ ಪರಿಹಾರ ಧನವನ್ನು ಬಿಡುಗಡೆ ಮಾಡಬಹುದು ಎಂದು ಹೇಳಿದರು. ಅಂತೆಯೇ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಧಿಕಾರಿಗಳು ಮತ್ತು ಉಸ್ತುವಾರಿ ಸಚಿವರು ಹೆಚ್ಚವರಿ ಸಮಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿ ಜನರಿಗೆ ನೆರವಾಗುತ್ತಿದ್ದಾರೆ. ಪ್ರವಾಹ ಮಾತ್ರವಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ಕೂಡ ಇದ್ದು, ಅಲ್ಲಿಗೂ ಭೇಟಿ ನೀಡಲು ನಾನು ನಿರ್ಧರಿಸಿದ್ದೇನೆ ಎಂದು ಹೇಳಿದರು.

ಇನ್ನು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತು ಮಾತನಾಡಿದ ಸಿಎಂ, ಬೆಳಗಾವಿಯ ಉಪ ಆಯುಕ್ತರು ತಮಗೆ ಪತ್ರ ಬರೆದಿದ್ದು, ಪತ್ರದಲ್ಲಿ ಪ್ರವಾಹದಿಂದಾಗಿ ಈ ಬಾರಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಈ ಬಾರಿಯ ಅಧಿವೇಶನ ಬೆಳಗಾವಿಯಲ್ಲಿ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com