ಡಿಜೆ ಹಳ್ಳಿ ಗಲಭೆ; ಆಸ್ತಿ ನಷ್ಟ ವಸೂಲಿಗೆ ಸರ್ಕಾರ ಕ್ರಮ, ಕ್ಲೇಮ್ ಕಮಿಷನರ್ ನೇಮಿಸುವಂತೆ ಹೈಕೋರ್ಟ್‌ಗೆ ಮನವಿ

ಡಿ.ಜೆ.ಹಳ್ಳಿ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಂದು ಕಾವೇರಿಯಲ್ಲಿ ಮಹತ್ವದ ಸಭೆ ನಡೆಯಿತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಡಿ.ಜೆ.ಹಳ್ಳಿ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಂದು ಕಾವೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಬೆಂಗಳೂರು ನಗರದ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ಸಂಭವಿಸಿದ ಗಲಭೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಹಾಗೂ ಖಾಸಗಿ ಸ್ವತ್ತುಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆ ಕೋರರಿಂದ ವಸೂಲು ಮಾಡುವ ಬಗ್ಗೆ ರಾಜ್ಯ ಉಚ್ಛ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ, ಈಗಾಗಲೇ ನೀಡಲಾಗಿರುವ ದೇಶದ ಉಚ್ಛ ನ್ಯಾಯಾಲಯದ ಆದೇಶದಂತೆ ಕ್ಲೇಮ್ ಕಮಿಷನರ್ ನೇಮಿಸಲು ಕೋರುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಉಪಸ್ಥಿತರಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಈ ಗಲಭೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು. ಅಲ್ಲದೇ ಈ ಪ್ರಕರಣಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯಿದೆ(UAPA)ಯನ್ನು ಸಹ ಅಳವಡಿಸಿರುವುದರ ಬಗ್ಗೆ ತಿಳಿಸಲಾಯಿತು. 

ಈ ತನಿಖೆಗಳನ್ನು ತ್ವರಿತವಾಗಿ ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.ಈಗಾಗಲೇ ದಾಖಲಾಗಿರುವ ಅಪರಾಧ ಪ್ರಕರಣಗಳ ತ್ವರಿತ ಹಾಗೂ ಪರಿಣಾಮಕಾರಿ ವಿಚಾರಣೆಗೆ ಅನುವಾಗುವಂತೆ ಮೂವರು ಸದಸ್ಯರನ್ನು ಒಳಗೊಂಡ ವಿಶೇಷ ಅಭಿಯೋಜಕರ ತಂಡವನ್ನು ರಚಿಸಲಾಗುವುದು. ಈ ಅಪರಾಧ ಪ್ರಕರಣಗಳಲ್ಲಿ ಬಂಧಿತ ಅಪರಾಧಿಗಳಿಗೆ ಸಂಬಂಧಪಟ್ಟಂತೆ ಅವಶ್ಯ ಕಂಡವರನ್ನು ಗುಂಡಾ ಕಾಯಿದೆಯಡಿಯಲ್ಲಿ ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್, ಗುಪ್ತವಾರ್ತೆ ವಿಭಾಗದ ಎಡಿಜಿಪಿ ಬಿ. ದಯಾನಂದ, ಪೊಲೀಸ್‌ ಕಮಿಷನರ್‌, ಕಮಲ್‍ಪಂತ್, ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಮರ ಕುಮಾರ್ ಪಾಂಡೆ ಇದ್ದರು.

ಯುಎಪಿಎ, ಗೂಂಡಾ ಕಾಯ್ದೆಯಡಿ ಕ್ರಮಕೈಗೊಳ್ಳಲು ತೀರ್ಮಾನ
 ಗಲಭೆ ಪ್ರಕರಣಗಳಲ್ಲಿ ಬಂಧಿತ ಅಪರಾಧಿಗಳಿಗೆ ಸಂಬಂಧಪಟ್ಟಂತೆ ಅಗತ್ಯ ಬಿದ್ದರೆ ಗೂಂಡಾ ಕಾಯ್ದೆಯಡಿ ಬಂಧಿಸಿ ಕ್ರಮ ಕೈಗೊಳ್ಳಲು ಕೂಡಾ ಸಭೆಯಲ್ಲಿ ನಿರ್ಧರಿಸಲಾಗಿದೆ. ಗಲಭೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕೈಗೊಂಡಿರುವ ಕಠಿಣ ಕ್ರಮಗಳ ಕುರಿತು ಪೊಲೀಸ್‌ ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು. ಅಲ್ಲದೆ, ಈ ಪ್ರಕರಣಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಳವಡಿಸಿರುವುದರ ಬಗ್ಗೆ ತಿಳಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com