ಬೆಂಗಳೂರು ಗಲಭೆ ಪ್ರಕರಣ: ಮತ್ತೆ 53 ಜನ ಆರೋಪಿಗಳ ಬಂಧನ, ನಿಷೇಧಾಜ್ಞೆ ತೆರವು

ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ 53 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಡಿಜೆ ಹಳ್ಳಿ ಗಲಭೆ ಪ್ರಕರಣ
ಡಿಜೆ ಹಳ್ಳಿ ಗಲಭೆ ಪ್ರಕರಣ

ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ 53 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕೆಜಿ ಹಳ್ಳಿ, ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸಮುದಾಯ ವಿರೋಧಿ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಹಿನ್ನೆಲೆಯಲ್ಲಿ ನಡೆದಿದ್ದ ಗಲಭೆಯಿಂದ ಇಡೀ ರಾಜ್ಯವೇ ಬೆಚ್ಚಿಬಿದ್ದಿತ್ತು. ಸಮುದಾಯ ವಿರೋಧಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿಯಾಗಿದ್ದರಿಂದ  ಉದ್ರಿಕ್ತರಿಂದ ಶಾಸಕರ ಮನೆಗೆ ರಾತ್ರಿ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಆರೋಪಿ ನವೀನ್ ಮನೆ ಬಳಿ ಬಂದು ದಾಂಧಲೆ ಮಾಡಿದ್ದ 23 ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆ ಮೂಲಕ ಪ್ರಕರಣ ಸಂಬಂಧ  ಪೊಲೀಸರು ನಿನ್ನೆ ಒಟ್ಟು 53 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಗಲಭೆ ಪೀಡಿತ ಪ್ರದೇಶದಲ್ಲಿ : ಪೊಲೀಸ್ ಬಿಗಿ ಭದ್ರತೆ ಮುಂದುವರಿಕೆ
ಇನ್ನು ಗಲಭೆ ಪೀಡಿತ ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ಜಾರಿಯಾಗಿದ್ದ ನಿಷೇಧಾಜ್ಞೆ ಇಂದಿನಿಂದ ತೆರವುಗೊಳಿಸಲಾಗಿದೆ. ಆ.11ರಂದು ನಡೆದ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದವರು ಸಾಕ್ಷಿ ನಾಶ ಮಾಡುವ ಸಾಧ್ಯತೆ ಸೇರಿ ಗುಪ್ತಚರ ಮಾಹಿತಿ ಆಧರಿಸಿ ಎರಡು ಠಾಣಾ ವ್ಯಾಪ್ತಿಯಲ್ಲಿ ಕಳೆದ ಒಂದು  ವಾರದಿಂದ 144 ಸೆಕ್ಷನ್ ​ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಇಂದು ಬೆಳಗ್ಗೆ 6 ಗಂಟೆಯಿಂದ ನಿಷೇಧಾಜ್ಞೆ ತೆರವುಗೊಳಿಸಲಾಗಿದೆ. ಆದರೆ, ಸೂಕ್ಷ್ಮ ಪ್ರದೇಶವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಬಿಗಿ ಭದ್ರತೆ  ಮುಂದುವರಿಸಲಾಗಿದೆ.ಆ.11ರಂದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿ ನವೀನ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಸಮುದಾಯ ವಿರೋಧಿ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಹಿನ್ನೆಲೆಯಲ್ಲಿ ಕೆಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಲಭೆ ಸ್ಫೋಟಗೊಂಡಿತ್ತು. ಅಲ್ಲದೇ,  ಪೊಲೀಸ್ ಗೋಲಿಬಾರ್ ನಲ್ಲಿ ನಾಲ್ವರು ಸಾವನ್ನಪ್ಪಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com