ಶಾಂತಿ ಕಾಪಾಡುವಂತೆ ಮನವಿ
ಶಾಂತಿ ಕಾಪಾಡುವಂತೆ ಮನವಿ

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ: ಶಾಂತಿ ಕಾಪಾಡುವಂತೆ ರಾಜಕೀಯ ನಾಯಕರುಗಳ ಮನವಿ

ಬೆಳಗಾವಿಯ ಪೀರನವಾಡಿಯಲ್ಲಿನ  ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
Published on

ಬೆಂಗಳೂರು: ಬೆಳಗಾವಿಯ ಪೀರನವಾಡಿಯಲ್ಲಿನ  ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಾನು ಈಗಷ್ಟೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ, ಅಲ್ಲಿನ ಜಿಲ್ಲಾಧಿಕಾರಿ‌,  ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ ಎಂದವರು ತಿಳಿಸಿದರು.  

ಸಂಗೊಳ್ಳಿ‌ ರಾಯಣ್ಣನ ಪ್ರತಿಮೆ ಸ್ಥಾಪನೆಯನ್ನು ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು ಎಂದಿದ್ದಾರೆ. ಇದೇ ವೇಳೆ ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು‌ ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ಸಿದ್ದರಾಮಯ್ಯ  ಅವರು ಮನವಿ ಮಾಡಿದ್ದಾರೆ.

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಲು ಸರಕಾರ ಬದ್ದವಾಗಿದೆ. ಯಾರಾದರೂ ಹದ್ದುಮೀರಿ ವರ್ತಿಸಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಸಹನೆಯಿಂದ ವರ್ತಿಸಬೇಕು. ಸಣ್ಣಪುಟ್ಟ ಸಮಸ್ಯೆಗಳಿದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಕಾನೂನು ಸುವ್ಯಸವಸ್ಥೆ ಹಾಳು ಮಾಡಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು  ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

X

Advertisement

X
Kannada Prabha
www.kannadaprabha.com