ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ಇನ್ನೂ ಒಂದು ತಿಂಗಳು ಜೈಲೇ ಗಟ್ಟಿಯಾಗಿದ್ದು, ನಟಿಯ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಹೌದು.. ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದಲ್ಲಿ ನಂಟು ಹೊಂದಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿಗೆ ಜನವರಿವರೆಗೂ ಬಿಡುಗಡೆ ಭಾಗ್ಯ ಇಲ್ಲದಂತಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ನಟಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ, ಜನವರಿ ಮೊದಲ ವಾರಕ್ಕೆ ಮುಂದೂಡಿದೆ.
ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳಾದ ಆರ್ ಎಫ್ ನಾರಿಮನ್, ನವೀನ್ ಸಿನ್ಹಾ ಮತ್ತು ಕೆ ಎಂ ಜೋಸೆಫ್ ನೇತೃತ್ವದ ಪೀಠ ಪ್ರಕರಣ ಸಂಬಂದ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಇದೇ ವೇಳೆ ಸುಪ್ರೀಂ ಕೋರ್ಟ್ ಸಿಸಿಬಿ ಪೊಲೀಸರಿಗೆ ನೋಟಿಸ್ ನೀಡಿದ್ದು, ಜೊತೆಗೆ, ರಾಜ್ಯ ಸರ್ಕಾರಕ್ಕೂ ನೋಟಿಸ್ ನೀಡಿರುವ ಸುಪ್ರೀಂಕೋರ್ಟ್, ವಿಚಾರಣೆಯನ್ನು ಮುಂದಿನ ತಿಂಗಳಿಗೆ ಮುಂದೂಡಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 4ರಂದು ತುಪ್ಪದ ಬೆಡಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಎನ್‌ಡಿಪಿಎಸ್ ಮತ್ತು ಐಪಿಸಿ ಕಾಯಿದೆಗಳಡಿಯಲ್ಲಿ ರಾಗಿಣಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ, ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
Advertisement